
ಬೆಂಗಳೂರು, ನವೆಂಬರ್ 25: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳ ಅಬ್ಬರ ಜೋರಾಗಿದೆ. ಒಂದು ಕಡೆ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಕಳೆದ 9 ದಿನಗಳಿಂದ ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಬಿಸಿಯೂಟ ಕಾರ್ಯಕರ್ತೆಯರು ಹಾಗೂ ಶಿಕ್ಷಣ ತಜ್ಞರು ರಾಜ್ಯ ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಪ್ರತಿಭಟನೆಗಿಳಿದಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕ್ಲಸ್ಟರ್ ಕಿಚನ್ ಸ್ಥಾಪನೆ, ಶಾಲಾ ದತ್ತು ಹಾಗೂ ಮೆಂಟರ್ ಯೋಜನೆಗಳನ್ನು ಕೈಬಿಡುವಂತೆ ಆಗ್ರಹಿಸಿ ಪ್ರತ್ಯೇಕ ಪ್ರತಿಭಟನೆಗಳು ನಡೆಯುತ್ತಿವೆ.
ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿರುವುದನ್ನು ವಿರೋಧಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳು ಹಾಗೂ ಸಂಘಟನೆಗಳಿಗೆ ವಹಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಶಿಕ್ಷಕರು ಕೂಡ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಸುಮಾರು 1.20 ಲಕ್ಷ ಬಿಸಿಯೂಟ ಕಾರ್ಯಕರ್ತೆಯರಿದ್ದು, ಕ್ಲಸ್ಟರ್ ಕಿಚನ್ ಆರಂಭವಾದರೆ ಸುಮಾರು 60 ಸಾವಿರ ಮಂದಿ ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಇದು ತಮ್ಮ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಸರ್ಕಾರ ಕೂಡಲೇ ನಿರ್ಧಾರ ಹಿಂಪಡೆಯಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷೆ ಹನುಮಕ್ಕ ಒತ್ತಾಯಿಸಿದ್ದಾರೆ. ಪ್ರತಿಭಟನೆಗೆ ಪೊಲೀಸರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಅವಕಾಶ ಕಲ್ಪಿಸಿದ್ದು, ರಸ್ತೆ ಬಂದ್ ಮಾಡಿ ಧರಣಿ ನಡೆಸಲು ಮುಂದಾಗಿದ್ದಾರೆ.
ಇನ್ನೊಂದೆಡೆ ಸರ್ಕಾರಿ ಶಾಲೆಗಳ ದತ್ತು ಯೋಜನೆ ಹಾಗೂ ಮೆಂಟರ್ ಯೋಜನೆ ವಿರೋಧಿಸಿ ನಾಡಿನ ಸಾಹಿತಿಗಳು, ಶಿಕ್ಷಣ ತಜ್ಞರು ಮತ್ತು ಹೋರಾಟಗಾರರು ಇಂದಿನಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ. ಸರ್ಕಾರಿ ಶಾಲೆಗಳ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದರಿಂದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಅಪಾಯ ಎದುರಾಗಲಿದೆ ಎಂಬುದು ಪ್ರತಿಭಟನಾಕಾರರ ವಾದವಾಗಿದೆ.
ದಾನ-ಧರ್ಮ ಅಥವಾ ದತ್ತು ಯೋಜನೆಗಳ ಹೆಸರಿನಲ್ಲಿ ಶಿಕ್ಷಣದ ಹೊಣೆಯನ್ನು ಸರ್ಕಾರ ಖಾಸಗಿಯವರಿಗೆ ವರ್ಗಾಯಿಸಬಾರದು. ಸರ್ಕಾರಿ ಶಾಲೆಗಳ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೂರು ತಿಂಗಳೊಳಗೆ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೊಳಿಸುವ ಕುರಿತು ಕಾರ್ಯಯೋಜನೆ ಪ್ರಕಟಿಸಬೇಕು. ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರನ್ನು ನೇಮಕ ಮಾಡಬೇಕು, ಅಗತ್ಯ ಮೂಲಸೌಕರ್ಯ ಒದಗಿಸಬೇಕು ಹಾಗೂ ಅನುದಾನಕ್ಕೆ ಸ್ಪಷ್ಟ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಲಿಖಿತ ಭರವಸೆ ನೀಡಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರಿಸುವುದಾಗಿ ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:29 am, Wed, 25 November 26