ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಮುಜರಾಯಿ ಸುಪರ್ದಿಗೆ
ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಹುಂಡಿ ಹಣದ ದುರುಪಯೋಗ ಮತ್ತು ಪಾರದರ್ಶಕತೆಯ ಕೊರತೆಯಿಂದಾಗಿ 1997ರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಅಧಿನಿಯಮದಡಿ ದೇವಸ್ಥಾನವನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಬೆಂಗಳೂರು, ಜುಲೈ 10: ಬೆಂಗಳೂರಿನ (Bengaluru) ಮೈಸೂರು ರಸ್ತೆಯ (Mysore Road) ಬ್ಯಾಟರಾಯನಪುರದಲ್ಲಿರುವ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು (Gali Anjaneya Swamy Temple) ಮುಜರಾಯಿ ಇಲಾಖೆ ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿದೆ. ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿದೆ. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿದೆ.
ವರದಿಯಲ್ಲಿ ಏನಿದೆ?
“ಬೆಂಗಳೂರು ನಗರ ಜಿಲ್ಲೆಯ ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯಸ್ವಾಮಿ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದೆ. ಆದರೂ, ಟ್ರಸ್ಟ್ನ ಪದಾಧಿಕಾರಿ ಹೊಂದಾಣಿಕೆ ಇಲ್ಲದೇ ಇರುವುದು ಹಾಗೂ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದ್ದು, ಪ್ರತಿ ವರ್ಷ ಉಳಿತಾಯವಿಲ್ಲದೇ ವೆಚ್ಚ ಮಾಡಲಾಗುತ್ತಿದೆ. ಇದರಿಂದ ದೇವಸ್ಥಾನದ ಹಣವು ದುರುಪಯೋಗವಾಗುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ.”
“ಅಲ್ಲದೆ, ಆದಾಯ ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆಗಳನ್ನು ಇಡದೆ ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ನೋಟೀಸ್ ನೀಡಿದ ನಂತರ ದಾಖಲೆಗಳನ್ನು ಸೃಷ್ಟಿಸಿರುವುದು ಕಂಡು ಬಂದಿದೆ. ಹಾಗೂ ದೇವಾಲಯದ ಸಿಬ್ಬಂದಿಗಳು ಹುಂಡಿ ಹಣ ಕದ್ದಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರದಾಡಿದ ವಿಡಿಯೋ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಕುಂದು ಉಂಟು ಮಾಡಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕ ಹಾಗೂ ಭಕ್ತಾಧಿಗಳ ಹಿತದೃಷ್ಟಿಯಿಂದ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಕಾಯ್ದೆ 1997ರ ಸೆಕ್ಷನ್ 42 ಮತ್ತು 43ರಡಿಯಲ್ಲಿ ಸರ್ಕಾರದ ವಶಕ್ಕೆ ಪಡೆಯುವುದು ಸೂಕ್ತವಾಗಿರುತ್ತದೆ” ಎಂದು ಮುಜರಾಯಿ ಇಲಾಖೆ ವರದಿ ಸಲ್ಲಿಸಿದೆ.
ಇದನ್ನೂ ಓದಿ: ದೇವರ ನಾಡಿನ ಕೊಟ್ಟಿಯೂರು ದೇವಸ್ಥಾನದ ವಿಶೇಷತೆ ಏನು? ಇಲ್ಲಿದೆ ಪೌರಾಣಿಕ ಕಥೆ
ಸರ್ಕಾರದ ಆದೇಶದಲ್ಲಿ ಏನಿದೆ?
“ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುತ್ತಿರುವುದು ಮತ್ತು ಹಣ ದುರುಪಯೋಗಪಡಿಸಿಕೊಂಡಿರುವುದು, ಟ್ರಸ್ಟ್ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು ‘ಕರ್ನಾಟಕ ಹಿಂದೂ ಧಾರ್ಮಿಕ ಸಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಕಲಂ ಸೆಕ್ಷನ್ 42 ಮತ್ತು 43ರನ್ವಯ “ಘೋಷಿತ ಸಂಸ್ಥೆ” ಎಂದು ಘೋಷಿಸಲಾಗಿದೆ” ಎಂದು ಆದೇಶ ಹೊರಡಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:05 pm, Thu, 10 July 25







