ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, 3 ತಿಂಗಳ ಅವಧಿಯಲ್ಲಿ 8ನೇ ಘಟನೆ
ಬಿಎಂಟಿಸಿ ಬಸ್ ಚಾಲಕ ನಾಗರಾಜ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು, ಡಿಸೆಂಬರ್ 28: ಬೆಂಗಳೂರಿನ ಸುಬ್ಬಯ್ಯ ವೃತ್ತದ ಬಳಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬಸ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು. ಮೃತರನ್ನು ಬೆಂಗಳೂರಿನ ಕಬ್ಬನ್‌ಪೇಟೆ ನಿವಾಸಿ ಪುಷ್ಪಾ ಎಂದು ಗುರುತಿಸಲಾಗಿದೆ.
ಪುಷ್ಪಾ ಅವರು ಮನೆಯಿಂದ ಸಮೀಪದ ಬೇಕರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ಆಕೆಗೆ ಗುದ್ದಿದ್ದು, ತಲೆಗೆ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣವೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಬಳಿಕ ಘಟನೆಯ ಬಗ್ಗೆ ಸಂತ್ರಸ್ತೆಯ ಕುಟುಂಬಕ್ಕೆ ಮಾಹಿತಿ ನೀಡಲಾಯಿತು.
ಬಿಎಂಟಿಸಿ ಬಸ್ ಚಾಲಕ ನಾಗರಾಜ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 15 ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಡಿಸೆಂಬರ್ 14 ರಂದು ಮಡಿವಾಳ ಫ್ಲೈಓವರ್ ಮೇಲೆ ಬಿಎಂಟಿಸಿ ಬಸ್ ದ್ವಿಚಕ್ರ ವಾನಕ್ಕೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದರು. ಬಿಎಂಟಿಸಿ ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದರು. ಮಡಿವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯ: ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ
ಮೂರು ತಿಂಗಳಲ್ಲಿ 8 ಮಂದಿ ಸಾವು
ಕಳೆದ ಮೂರು ತಿಂಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಬೆಂಗಳೂರಿನಲ್ಲಿ ಕನಿಷ್ಠ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ 71 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ