ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಬೆನ್ನಲ್ಲೇ ಸರ್ಕಾರ ಅಲರ್ಟ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರಿನಲ್ಲಿ ಮಳೆಯಿಂದ ಸರಣಿ ಅವಾಂತರಗಳು ಹೆಚ್ಚಾಗದಂತೆ ರಾಜ್ಯ ಸರ್ಕಾರ ಫುಲ್​​ ಅಲರ್ಟ್​ ಆಗಿದೆ. ಆ ನಿಟ್ಟಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆಗಳನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಬೆನ್ನಲ್ಲೇ ಸರ್ಕಾರ ಅಲರ್ಟ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
Image Credit source: x.com/siddaramaiah

Updated on: Apr 30, 2026 | 6:32 PM

ಬೆಂಗಳೂರು, ಏಪ್ರಿಲ್​​ 30: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು (Bowring Hospital Wall Collapse) ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತುಗೊಳಿಸಿ, ನೋಟಿಸ್ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.

ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆ ಇಂದು ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದರು. ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಸಭೆಯಲ್ಲಿ ಬೌರಿಂಗ್‌ ಆಸ್ಪತ್ರೆ ಮುಖ್ಯಸ್ಥರನ್ನು ಸಿಎಂ ತರಾಟೆಗೆ ತೆಗೆದುಕೊಂಡರು. ಕೂಡಲೇ ಸಂಬಂಧಪಟ್ಟ ಇಇ ಅಮಾನತುಗೊಳಿಸುವಂತೆ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಟ್ವೀಟ್​​

ಕೇವಲ ಒಂದು ಗಂಟೆಯ ಮಳೆಗೆ ನಗರದಲ್ಲಿ 250ಕ್ಕೂ ಹೆಚ್ಚು ಮರಗಳು ಉರುಳಿಬಿದ್ದಿರುವ ಮತ್ತು ರಸ್ತೆಗಳು ಜಲಾವೃತವಾಗಿರುವ ಬಗ್ಗೆ ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ, 90 ಮಿ.ಮೀ. ಮಳೆಯಾದರೂ ಯಾಕೆ ಸೂಕ್ತ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಮುಂಗಾರು ಮಳೆ ಆರಂಭಕ್ಕೂ ಮೊದಲೇ ಅಗತ್ಯ ಸಿದ್ಧತೆಗೆ ಸಿಎಂ ಸೂಚನೆ

ನಗರದ ಮೂಲಸೌಕರ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ ಸಿಎಂ, ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ತುರ್ತಾಗಿ ಮುಚ್ಚಬೇಕು, ರಾಜಕಾಲುವೆಗಳಲ್ಲಿನ ಹೂಳನ್ನು ತೆರವುಗೊಳಿಸಬೇಕು ಮತ್ತು ಅಂಡರ್ ಪಾಸ್​ಗಳಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು. ಒಂದು ವೇಳೆ ಅಂಡರ್ ಪಾಸ್​ಗಳಲ್ಲಿ ನೀರು ತುಂಬಿದರೆ ಪಂಪ್ ಸೆಟ್ ಬಳಸಿ ಕೂಡಲೇ ನೀರು ಹೊರಹಾಕಲು ವ್ಯವಸ್ಥೆ ಮಾಡಬೇಕು ಹಾಗೂ ಅಗತ್ಯಬಿದ್ದರೆ ಅಂಡರ್ ಪಾಸ್ ಮುಚ್ಚುವಂತೆಯೂ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆಯಿಂದ ಸರಣಿ ಅವಾಂತರ: ಇನ್ಮುಂದೆ ಫುಟ್‌ಪಾತ್​ನಲ್ಲಿ ವ್ಯಾಪಾರಕ್ಕೆ ಬ್ರೇಕ್!

ಇನ್ನು ಮುಂಜಾಗ್ರತಾ ಕ್ರಮವಾಗಿ, ನಗರದಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚಿಸಿದ ಸಿದ್ದರಾಮಯ್ಯ, ಅಪಾಯಕಾರಿ ಸ್ಥಿತಿಯಲ್ಲಿರುವ ಖಾಸಗಿ ಕಾಂಪೌಂಡ್ ಹಾಗೂ ಕಟ್ಟಡಗಳ ಮಾಲೀಕರಿಗೆ ಕೂಡಲೇ ನೋಟಿಸ್ ಜಾರಿ ಮಾಡಲು ತಿಳಿಸಿದರು. ಅಲ್ಲದೆ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ, ಅಪಾಯದ ಸ್ಥಿತಿಯಲ್ಲಿರುವ ವಿದ್ಯುತ್ ಕಂಬಗಳು ಮತ್ತು ಒಣಗಿದ ಮರಗಳ ರೆಂಬೆಗಳನ್ನು ಆಡಿಟ್ ಮಾಡಿ ಕೂಡಲೇ ತೆರವುಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:29 pm, Thu, 30 April 26

Follow Us