Karnataka Rains: ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಮಳೆ (Bangalore Rain) ಸುರಿಯುತ್ತಿದೆ. ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಿದ್ದರೆ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ಈ ಮಳೆಯ ಆರ್ಭಟ ಇನ್ನೂ 4 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಮುಂದಿನ 3 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ
ಇಂದು (ಬುಧವಾರ) ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ರಾತ್ರಿ ವೇಳೆಗೆ NDRF ಮತ್ತು SDRF ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಿಂದ 5,000ಕ್ಕೂ ಹೆಚ್ಚು ಜನರನ್ನು ರಕ್ಷಿಸಿವೆ.
ಐಟಿ ಮತ್ತು ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಸಂಜೆ 5 ಗಂಟೆಗೆ ವಿವಿಧ ಸಾಫ್ಟ್ವೇರ್ ಕಂಪನಿಗಳ ಸಿಇಒಗಳ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕಾಲಿಕವಾಗಿ ಭಾರೀ ಮಳೆ ತಂದಿರುವ ಸಮಸ್ಯೆಗಳನ್ನು ಪರಿಶೀಲಿಸಲು ಈ ಸಭೆ ಕರೆಯಲಾಗಿದೆ. ಮಳೆಯಿಂದಾಗಿ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಬಹುದು ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಸಭೆಯಲ್ಲಿ ಭಾಗವಹಿಸುವವರು ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸುತ್ತಾರೆ. ಅಲ್ಲದೆ, ಬಿಬಿಎಂಪಿ ಮುಖ್ಯ ಆಯುಕ್ತರು ನಗರದ ಸಮಸ್ಯೆಗಳ ಕುರಿತು ಪಿಪಿಟಿ ಮಂಡಿಸಲಿದ್ದಾರೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ
ಕಂಪನಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಈ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರು, ಬೆಂಗಳೂರು ಜಲ ಪ್ರಾಧಿಕಾರ, ನಗರಾಭಿವೃದ್ಧಿ ಇಲಾಖೆ ಪ್ರತಿನಿಧಿಗಳು ಹಾಗೂ ಡಾ. ನಗರ ಪೊಲೀಸ್ ಆಯುಕ್ತ ಪಾಲ್ಗೊಳ್ಳಲಿದ್ದಾರೆ.
ಇಂದು ರಜೆ ಘೋಷಣೆ:
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿ ಬೆಂಗಳೂರಿನ ದಕ್ಷಿಣ ವಲಯ-4 ಕೆ.ಆರ್. ಪುರಂ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿದ್ದಾರೆ.
IMD ಪ್ರಕಾರ, ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ, ಬಾಗಲಕೋಟೆ, ಬೆಂಗಳೂರು (ನಗರ), ಬೆಂಗಳೂರು (ಗ್ರಾಮೀಣ), ಚಿಕ್ಕಬಳಾಪುರ ಮತ್ತು ಕೋಲಾರದಲ್ಲಿ ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 9 ಅಂದರೆ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ 3 ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಹಳದಿ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಬೆಂಗಳೂರು ಮಳೆ ಅವಾಂತರ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ರಾಜಧಾನಿ ಜನರು
ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಅಪಾಯಕಾರಿ ಗಾಳಿ ಬೀಸುವ ಮುನ್ಸೂಚನೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಸುರಿಯುವ ನಿರೀಕ್ಷೆಯಿದೆ. ಮಳೆಯಿಂದಾಗಿ ಬೆಂಗಳೂರಿನಲ್ಲಿ ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬೆಂಗಳೂರು ನಗರವು ಸೋಮವಾರ ತೀವ್ರ ಪ್ರವಾಹ ಮತ್ತು ಜಲಾವೃತಕ್ಕೆ ಸಾಕ್ಷಿಯಾಯಿತು. ಇದರಿಂದಾಗಿ ಕಂಪನಿಗಳ ಉದ್ಯೋಗಿಗಳು ಮತ್ತು ಸಾರ್ವಜನಿಕರು ಟ್ರ್ಯಾಕ್ಟರ್ ಮತ್ತು ದೋಣಿಗಳ ಸಹಾಯದಿಂದ ಪ್ರಯಾಣಿಸಿರುವ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ.