Bangalore Rains: ಬೆಂಗಳೂರಿನಲ್ಲಿ (Rain in Bengaluru) ಕಳೆದ ಮೂರ್ನಾಲ್ಕು ದಿನಗಳಿಂದ ಸಂಜೆಯ ಬಳಿಕ ಭಾರೀ ಮಳೆಯಾಗುತ್ತಿದೆ. ನಿನ್ನೆಯೂ ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಜನಸಂಚಾರ ಅಸ್ತವ್ಯಸ್ತವಾಗಿತ್ತು. ಇಂದು ಕೂಡ ಸಂಜೆ 4.30ರಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದೆ. ಗುಡುಗು, ಮಿಂಚು ಸಹಿತ ಮಳೆಗೆ ಬೆಂಗಳೂರಿನ (Bengaluru Rains) ಜನರು ತತ್ತರಿಸಿದ್ದಾರೆ. ಆಫೀಸ್ ಕೆಲಸ ಮುಗಿಸಿ ಮನೆಯತ್ತ ತೆರಳುತ್ತಿದ್ದವರು, ರಸ್ತೆಯಲ್ಲಿ ವಾಹನಗಳಲ್ಲಿ ಹೋಗುತ್ತಿದ್ದವರು ಅಚಾನಕ್ಕಾಗಿ ಸುರಿಯಲಾರಂಭಿಸಿದ ಮಳೆಗೆ ಸಿಲುಕಿದ್ದಾರೆ. ಇನ್ನೂ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರ, ಬಸವನಗುಡಿ, ಹನುಮಂತನಗರ, ಬನಶಂಕರಿ, ವಿಜಯನಗರ, ಕೋರಮಂಗಲ, ಜಯನಗರ, ಜೆ.ಪಿ ನಗರ, ಬೊಮ್ಮನಹಳ್ಳಿ, ವೈಟ್ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ, ಎಂಜಿ ರಸ್ತೆ, ದೊಮ್ಮಲೂರು, ಬಿಟಿಎಂ ಲೇಔಟ್, ಮೆಜೆಸ್ಟಿಕ್, ಚಾಮರಾಜಪೇಟೆ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಖೆ ತಿಳಿಸಿದೆ. ಹಾಗೇ, ಇನ್ನೂ 5 ದಿನಗಳ ಕಾಲ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಇದಲ್ಲದೆ, ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರು ಮಾತ್ರವಲ್ಲೆ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೇ 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಇಂದು (ಬುಧವಾರ) ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನವು ಸುಮಾರು 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗುರುವಾರವೂ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇದೇ ರೀತಿ ಇರಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮೇ 5ರ ನಂತರ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
ಕೆಜಿಎಫ್ನಲ್ಲಿ ಆಲಿಕಲ್ಲು ಮಳೆ:
ಬೆಂಗಳೂರು ಮಾತ್ರವಲ್ಲದೆ ಇಂದು ಸಂಜೆಯಿಂದ ಕೆಜಿಎಫ್ ನಗರದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಕೋಲಾರ ಜಿಲ್ಲೆಯ ಹಲವೆಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಗುಡುಗು, ಬಿರುಗಾಳಿ ಸಹಿತ ಜೋರು ಮಳೆಯಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬಿಸಿಲಿನ ತಾಪದಿಂದ ಬಸವಳಿದಿದ್ದ ಕೋಲಾರದ ಜನರಿಗೆ ತಂಪೆರೆದಂತಾಗಿದೆ.
ಚಿಕ್ಕಮಗಳೂರಿನಲ್ಲೂ ಮಳೆಯ ಅಬ್ಬರ:
ಮಲೆನಾಡಿನ ಜಿಲ್ಲೆಗಳಲ್ಲೂ ಇಂದು ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯ ಸಿಂಚನವಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಗೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ವರುಣ ದೇವ ಇಂದು ಮತ್ತೆ ಅಬ್ಬರಿಸತೊಡಗಿದ್ದಾನೆ. ಮತ್ತೆ ಮಳೆಯ ಪುನರಾಗಮನದಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
Published On - 5:30 pm, Wed, 4 May 22