ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಅ.23ರವರೆಗೆ ‘ಎಲ್ಲೊ ಅಲರ್ಟ್’
ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಇಂದು 'ಆರೆಂಜ್ ಅಲರ್ಟ್' ಘೋಷಿಸಿದೆ. ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನ ಪರದಾಡಿದ್ದಾರೆ. ಇಂದಿನ ಭಾರತ-ವೆಸ್ಟ್ ಇಂಡೀಸ್ ನಿರ್ಣಾಯಕ T20 ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕ ಎದುರಾಗಿದೆ. ಅಕ್ಟೋಬರ್ 23ರವರೆಗೆ ಯೆಲ್ಲೊ ಅಲರ್ಟ್ ಮುಂದುವರಿಯಲಿದೆ.

ಬೆಂಗಳೂರು, ಅ.17: ಬೆಂಗಳೂರಿನಲ್ಲಿ 3ದಿನಗಳಿಂದ ಭಾರೀ ಮಳೆಯಾಗುತ್ತಿದೆ.ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ವರುಣ ದೇವ ಕೃಪೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ಇಂದು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಇದರ ಬೆನ್ನಲ್ಲೇ ಸಂಜೆ ನಗರದಾದ್ಯಂತ ಮಳೆ ಆರಂಭವಾಗಿದ್ದು, ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಅಂತಿಮ ಹಾಗೂ ನಿರ್ಣಾಯಕ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಆತಂಕ ಎದುರಾಗಿದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಮುಂದುವರಿದಿದ್ದು, ನಾಳೆಯಿಂದ ಅಕ್ಟೋಬರ್ 23ರವರೆಗೆ ‘ಎಲ್ಲೊ ಅಲರ್ಟ್’ ಘೋಷಿಸಲಾಗಿದೆ. ಹಾಗೆಯೇ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೆ ಎಲ್ಲೊ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಜೆ ವೇಳೆಗೆ ಬೆಂಗಳೂರಿನ ಲಾಲ್ಬಾಗ್, ಶಾಂತಿನಗರ, ಕಾರ್ಪೊರೇಷನ್ ವೃತ್ತ ಸೇರಿದಂತೆ ವಿವಿಧೆಡೆ ಬಿರುಸಿನ ಮಳೆ ಸುರಿಯಿತು. ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ (Traffic Jam) ಉಂಟಾಗಿ, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಯಿತು.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ 2 ಪಂದ್ಯಗಳನ್ನು ಗೆದ್ದು 2-2 ಸಮಬಲ ಸಾಧಿಸಿವೆ. ಇಂದು ನಡೆಯಲಿರುವ 5ನೇ ಹಾಗೂ ಕೊನೆಯ ಟಿ20 ಪಂದ್ಯವು ಸರಣಿ ವಿಜೇತರನ್ನು ನಿರ್ಧರಿಸಲಿದ್ದು, ಚಿನ್ನಸ್ವಾಮಿ ಅಂಗಳದ ಸುತ್ತ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದಾರೆ. ಆದರೆ ಸಂಜೆಯಿಂದ ಆರಂಭವಾಗಿರುವ ಮಳೆಯಿಂದಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತದೆಯೋ ಎಂಬ ಆತಂಕ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಭಾರತ- ವಿಂಡೀಸ್ ಪಂದ್ಯಕ್ಕೆ ಅಡ್ಡಿ
ಕರಾವಳಿ ಹಾಗೂ ಒಳನಾಡಿನಲ್ಲಿ ಯೆಲ್ಲೊ ಅಲರ್ಟ್ ಘೋಷಣೆ
ಅಕ್ಟೋಬರ್ 20 ರಿಂದ 22 ರವರೆಗೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 18 ರಿಂದ 23 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 17 ರಂದು (ಇಂದು) ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಈ ನಿರ್ದಿಷ್ಟ ದಿನಗಳಲ್ಲಿ ಒಂದೆರಡು ಕಡೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಐಎಂಡಿ ಯೆಲ್ಲೊ ಅಲರ್ಟ್ ನೀಡಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಕೋರಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:47 pm, Sat, 17 October 26




