ಬೆಂಗಳೂರಿನ ಹಲವಡೆ ಜೋರು ಮಳೆ: ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರ ಎಚ್ಚರಿಕೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಬಿರುಬೇಸಿಗೆಯಲ್ಲಿ ಸುರಿದ ಮಳೆ ರಾಜಧಾನಿ ಜನರಿಗೆ ತಂಪೆರೆಯುತ್ತಿದೆ. ಕೆಂಗೇರಿ, ಕೋರಮಂಗಲ ಮುಂತಾದ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದೆ. ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು, ಏಪ್ರಿಲ್ 20: ಬಿರುಬೇಸಿಗೆಯಲ್ಲೂ (Summer) ಆಗಾಗ ಮಳೆ (Rain) ಸುರಿಸುತ್ತಾ ವರುಣ ಬೆಂಗಳೂರು (Bengaluru) ಸೇರಿದಂತೆ ರಾಜ್ಯಕ್ಕೆ ತಂಪೆರೆಯುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ಅಲ್ಪಮಟ್ಟಿಗೆ ಬಿಡುವು ನೀಡಿದ್ದ ಮಳೆ, ರವಿವಾರ (ಏ.20) ಸಂಜೆ ಮತ್ತೆ ತನ್ನ ಆರ್ಭಟವನ್ನು ಮುಂದುವರೆಸಿದೆ. ಬೆಂಗಳೂರು ನಗರದ ಕೆಂಗೇರಿ, ಮಹದೇವಪುರ, ಗರುಡಚಾರ ಪಾಳ್ಯ, ಕೆ.ಆರ್.ಪುರಂ, ಹೂಡಿ, ಸಿಂಗನಾಯಕನಹಳ್ಳಿ, ಕೋರಮಂಗಲ, ಆಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಳೆಯಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.
ವೈಟ್ಫಿಲ್ಡ್ ಸುತ್ತಮುತ್ತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾಲಕರು ನಿಧಾನವಾಗಿ ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:04 pm, Sun, 20 April 25