Bengaluru Rain: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ: ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ
ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆಯ ಬಳಿಕ ಮಳೆ ಸುರಿಯಲಾರಂಭಿಸಿದೆ. ಮೂರ್ನಾಲ್ಕು ದಿನಗಳಿಂದ ಸಂಜೆ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ಇಂದು ಕೂಡ ಕಾರ್ಪೋರೇಷನ್, ಶಾಂತಿನಗರ, ಮೈಸೂರ್ ಬ್ಯಾಂಕ್ ಸರ್ಕಲ್ , ಕೆ.ಆರ್. ಮಾರ್ಕೆಟ್ ಸೇರಿದಂತೆ ಹಲವೆಡೆ ಗಾಳಿ ಸಹಿತ ಮಳೆರಾಯನ ಆರ್ಭಟ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಜನಸಂಚಾರ ಅಸ್ತವ್ಯಸ್ತವಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ.
ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿಕೆ ನೀಡಿದ್ದಾರೆ.
ಇನ್ನಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.