
ಬೆಂಗಳೂರು, ಅಕ್ಟೋಬರ್ 23: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ ಹೆಚ್ಚಾಗಿದೆ. ನಗರದ ಕೆ.ಆರ್. ಮಾರುಕಟ್ಟೆ, ರಿಚ್‌ಮಂಡ್ ಟೌನ್, ನಂಜಪ್ಪ ಸರ್ಕಲ್ ಮತ್ತು ಗಿರಿನಗರ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಮಳೆ ಕಂಡುಬಂದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇಂದು ಮತ್ತು ನಾಳೆ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆಯ ವರದಿಯಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ಕೆ.ಆರ್. ವೃತ್ತದ ಸಿಗ್ನಲ್‌ನಲ್ಲಿ ಸ್ಕಿಡ್ ಆಗಿ ದ್ವಿಚಕ್ರ ವಾಹನದಿಂದ ಬಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದು, ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಸಿಡಿಲು ಬಡಿದು ಹಾಸಿಗೆ ತಯಾರಿಕಾ ಘಟಕ ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಇದರೊಂದಿಗೆ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸಾಗರ ನಗರದಲ್ಲೂ ಬಿರುಗಾಳಿ ಸಹಿತ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡುವಂತಾಯಿತು. ಇಂದೂ ಸಹ ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಸಾಧಾರಣ ಮಳೆಯಾಗಿದೆ. ಇಂದಿನಂತೆ ನಾಳೆಯೂ (ಅ.24) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ಇದೆ. ಇದರೊಂದಿಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಂಭವವಿದ್ದು, ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಇದನ್ನೂ ಓದಿ Karnataka Weather: ಅಕ್ಟೋಬರ್ 24ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮಳೆ ಮುನ್ಸೂಚನೆಯ ನಡುವೆಯೂ ಮುಂಬರುವ ಚಳಿಗಾಲದ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಉತ್ತಮ ಚಳಿ ಇರಲಿದ್ದು, ದಕ್ಷಿಣ ಒಳನಾಡಿಗೆ ಹೋಲಿಸಿದರೆ ಉತ್ತರ ಒಳನಾಡಿನಲ್ಲಿ ಚಳಿಯ ತೀವ್ರತೆ ಹೆಚ್ಚಿರಲಿದೆ. ಕರಾವಳಿ ಭಾಗದಲ್ಲಿ ಚಳಿಯ ಪ್ರಭಾವ ಕಡಿಮೆ ಇರಲಿದೆ. ಒಟ್ಟಿನಲ್ಲಿ ಅಕ್ಟೋಬರ್ ಅಂತ್ಯದವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:03 am, Fri, 23 October 26