ಬೆಂಗಳೂರು ಕಾಲ್ತುಳಿತ: ಕೋರ್ಟ್ನಲ್ಲಿ ಸಿಐಡಿಗೆ ಹಿನ್ನೆಡೆ, ಆರೋಪಿಗಳು ಮತ್ತೆ ಪರಪ್ಪನ ಅಗ್ರಹಾರಕ್ಕೆ
Bengaluru RCB Victory Celebrations Stampede: ಬುಧವಾರ (ಜೂ.03) ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ಕೋರ್ಟ್ ಮುಂದೆ ಹಾಜರುಪಡಿಸಿದರು. ಕೋರ್ಟ್ ನಲ್ಲಿ ಸಿಐಡಿ ಅಧಿಕಾರಿಗಳಿಗೆ ಹಿನ್ನೆಡೆಯಾಗಿದೆ.

ಬೆಂಗಳೂರು, ಜೂನ್ 09: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy stadium Stampede) ಆರ್ಸಿಬಿಯ (RCB) 11 ಅಭಿಮಾನಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 1ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದರು. ಕೋರ್ಟ್ನಲ್ಲಿ ಸಿಐಡಿ ಅಧಿಕಾರಿಗಳಿಗೆ ಹಿನ್ನೆಡೆಯಾಗಿದೆ.
ಸಿಐಡಿ ಅಧಿಕಾರಿಗಳು ಮಂಗಳವಾರ (ಜೂ.10) ಆರೋಪಿಗಳಾದ ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ, ಸುನಿಲ್ ಮ್ಯಾಥ್ಯೂ, ಕಿರಣ್, ಶಮಂತ್ ಅವರನ್ನು 1ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಿದರು. ಈ ವೇಳೆ ಆರೋಪಿಗಳ ಪರ ವಕೀಲರು, ಹೈಕೋರ್ಟ್ ನೀಡಿದ ಆದೇಶದ ಮಾಹಿತಿಯನ್ನು 1ನೇ ಎಸಿಜೆಎಂ ಕೋರ್ಟ್ಗೆ ನೀಡಿದರು. ಹೈಕೋರ್ಟ್ನಲ್ಲಿ ಬಾಕಿಯಿರುವ ಅರ್ಜಿ ಇತ್ಯರ್ಥವಾಗುವವರೆಗೆ ಸಿಐಡಿ ಕಸ್ಟಡಿಗೆ ಕೇಳದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸಿಐಡಿ ಅಧಿಕಾರಿಗಳು ವಾಪಸ್ ಪಡೆದರು. ಆರೋಪಿಗಳನ್ನು ಸಿಐಡಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋದರು.
ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್ ಅಧಿಕಾರಿ ಅರ್ಜಿ
ಕಾಲ್ತುಳಿತ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು. ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT)ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಕಾರಣವೇನು? ಮತ್ತಷ್ಟು ಸ್ಫೋಟಕ ಅಂಶಗಳು ಬಯಲಿಗೆ
ರಾಜ್ಯ ಸರ್ಕಾರಕ್ಕೆ ಸಿಎಟಿ ನೋಟಿಸ್
ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ (ಜೂ.10) ವಿಚಾರಣೆ ನಡೆಸಿತು. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಎಜಿ ಕಾಲಾವಕಾಶ ಕೋರಿದರು. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ, ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.