
ಬೆಂಗಳೂರು, ಮೇ 03: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ (Karnataka Weather) ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಕಲ್ಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಮಳೆ ಹಲವರನ್ನು ಬಲಿ ಪಡೆದಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:41 am, Sun, 3 May 26