ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಶಿಫಾರಸಿಗೆ ನಿರ್ಧಾರ ಮಾಡಲಾಗಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಕೋರ್ ಕಮಿಟಿ ಸಭೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಜಯೇಂದ್ರ ಹೆಸರನ್ನು ಮಾಜಿ ಸಿಎಂ ಯಡಿಯೂರಪ್ಪ ಪ್ರಸ್ತಾಪ ಮಾಡಿದರು. ನಾವು ಹೆಸರು ಕಳುಹಿಸುತ್ತೇವೆ, ಮೇಲಿನವರು ತೀರ್ಮಾನ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 1:5 ಆಧಾರದಲ್ಲಿ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೋರ್ ಕಮಿಟಿ ಸಭೆ ಅಧಿಕಾರ ನೀಡಿದೆ. ಸಿಎಂ ಮತ್ತು ರಾಜ್ಯಾಧ್ಯಕ್ಷರು ಮತ್ತೊಮ್ಮೆ ಮಾತುಕತೆ ನಡೆಸಿ ಕೇಂದ್ರೀಯ ಚುನಾವಣಾ ಸಮಿತಿಗೆ ಹೆಸರುಗಳು ರವಾನೆಯಾಗಲಿವೆ.
ಹೈಕಮಾಂಡ್ ಅಂಗೀಕರಿಸಿದರೆ ವಿಜಯೇಂದ್ರ ಎಂಎಲ್ ಸಿ ಆಗುವುದು ಖಚಿತ
ರಾಜ್ಯದಲ್ಲಿ 7 MLC ಸ್ಥಾನಗಳ ಪೈಕಿ 4 ಸ್ಥಾನ ಗೆಲ್ಲಲು ಆಡಳಿತಾರೂಢ ಬಿಜೆಪಿ ಸ್ವಂತ ಬಲದಿಂದ ಶಕ್ತ್ಯವಾಗಿದೆ. ಹೈಕಮಾಂಡ್ ಅಂಗೀಕರಿಸಿದರೆ ವಿಜಯೇಂದ್ರ ಎಂಎಲ್ ಸಿ ಆಗುವುದು ಖಚಿತವಾಗಿದೆ. ಸದ್ಯಕ್ಕೆ ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷ ಸ್ಥಾನ ಹೊಂದಿದ್ದಾರೆ. ಪರಿಷತ್ನ ನಾಲ್ಕು ಸ್ಥಾನಗಳಿಗೆ 5 ಹೆಸರು ಕಳುಹಿಸುವಂತೆ ಬಿಜೆಪಿ ಕೋರ್ ಕಮಿಟಿ ಸಭೆಗೂ ಮುನ್ನ ಹೈಕಮಾಂಡ್ ಸೂಚಿಸಿತ್ತು. ಸೋಷಿಯಲ್ ಇಂಜಿನಿಯರಿಂಗ್ ಆಧಾರದಲ್ಲಿ ಕಳಿಸುವಂತೆ ಸೂಚಿಸಲಾಗಿತ್ತು. ಅದರಂತೆ 4 ಸ್ಥಾನಗಳಿಗೆ ಒಟ್ಟು 20 ಹೆಸರು ಕಳುಹಿಸಲು ತೀರ್ಮಾನ ಮಾಡಲಾಗಿದೆ. ಇನ್ನು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಹಿಳಾ ಕೋಟಾದಡಿ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಅವರ ಹೆಸರು ಕಾಣಿಸಿಕೊಂಡಿದೆ.
ರಾಜ್ಯಸಭೆಯ ಎರಡು ಸ್ಥಾನಗಳಿಗೆ ಇಬ್ಬರ ಹೆಸರು ಶಿಫಾರಸು
ಹಾಲಿ ಮೇಲ್ಮನೆ ಸದಸ್ಯರಾದ ನಿರ್ಮಲಾ ಸೀತಾರಾಮನ್ ಮತ್ತು ಕೆ.ಸಿ. ರಾಮಮೂರ್ತಿ ಅವರಿಬ್ಬರ ಹೆಸರುಗಳನ್ನೂ ರಾಜ್ಯಸಭೆಗೆ ಶಿಫಾರಸು ಮಾಡಲು ನಿರ್ಧರಿಸಿದೆ. ರಾಜ್ಯಸಭೆಯ 2ನೇ ಸ್ಥಾನಕ್ಕೆ ಹಾಲಿ ಸದಸ್ಯ ಕೆ.ಸಿ.ರಾಮಮೂರ್ತಿ, ನಿರ್ಮಲ್ ಕುಮಾರ್ ಸುರಾನಾ ಸೇರಿದಂತೆ ಐವರ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಶಿಫಾರಸು ಮಾಡಿದ್ದಾರೆ.
ವಿಧಾನ ಪರಿಷತ್ 4 ಸ್ಥಾನಗಳಿಗೆ ಜೂನ್ 15ಕ್ಕೆ ಮತದಾನ:
ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 19ರಂದು ಪರಿಷತ್ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನ. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮೇ 18ರಂದು ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜೀನಾಮೆ ನೀಡಿದ ನಂತರ ಮೇ 19ರಂದು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿಯು ದಾವೋಸ್ಗೆ ತೆರಳುವ ಮುನ್ನ ಹೊರಟ್ಟಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಹೊರಟ್ಟಿ ಅವರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯುವ ಸಾಧ್ಯತೆಯಿದೆ.
ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ಸುದ್ದಿಗೆ ಲಿಂಕ್
ರಾಜ್ಯದಲ್ಲಿ ಜೂನ್ ವೇಳೆಗೆ ವಿಧಾನ ಪರಿಷತ್ ಚುನಾವಣೆ (MLC Elections) ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ. ಈ ಸಂಬಂಧ ಭಾರತೀಯ ಜನತಾ ಪಕ್ಷ- ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ. ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅರುಣ್ ಶಹಾಪುರ್ ಬಿಜೆಪಿ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಕಾಂಗ್ರೆಸ್ನಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ಘೋಷಣೆ: ಡಿಕೆ ಶಿವಕುಮಾರ್
ಇತ್ತ ಕಾಂಗ್ರೆಸ್ನಲ್ಲಿ ಪರಿಷತ್ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಧುಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಇನ್ನೆರಡು ಕ್ಷೇತ್ರಗಳಿಗೆ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:46 pm, Sat, 14 May 22