ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆ ರದ್ದು ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದೆ.
ಬೆಂಗಳೂರು, ಜುಲೈ 31: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ತನ್ನ ವಿರುದ್ಧದ ಸಿಬಿಐ (CBI) ತನಿಖೆ ರದ್ದು ಕೋರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D. K. Shivakumar) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ತೀರ್ಪು ಕಾಯ್ದಿರಿಸಿದೆ.
ಅರ್ಜಿ ವಿಚಾರಣೆ ಸಮಯದಲ್ಲಿ ಡಿಕೆ ಶಿವಕುಮಾರ್ ಪರ ವಕೀಲರು, ಅಕ್ರಮ ಆಸ್ತಿ ಗಳಿಕೆ ಪ್ರಮಾಣದ ಕಾನೂನುಬದ್ಧತೆ ಪ್ರಶ್ನಿಸಿದ್ದಾರೆ. ಹೀಗಾಗಿ ಎರಡು ದಿನಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ತನಿಖೆಯ ಕೇಸ್ ಡೈರಿ ಹಾಜರುಪಡಿಸುವಂತೆ ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರಿಗೆ ಹೈಕೋರ್ಟ್ ಸೂಚನೆ ನೀಡಿದ್ದಾರೆ.
ಅರ್ಜಿದಾರರು ಸಿಬಿಐನ ತನಿಖೆ ಆದೇಶವನ್ನು ಸಂಶಯಿಸುತ್ತಿದ್ದರು. ಒಮ್ಮೆ ಅನುಮಾನ ಆರಂಭವಾದರೆ ಎಲ್ಲವನ್ನೂ ಸಂಶಯಿಸುತ್ತಾರೆ. ಹೀಗಾಗಿ ಯಾವುದೇ ತಿದ್ದುಪಡಿಯಿಲ್ಲದೇ ಕೇಸ್ ಡೈರಿಯನ್ನು ಹಾಜರುಪಡಿಸುವಂತೆ ಹೈಕೋರ್ಟ್ ಸೂಚಿಸಿ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿತು. ಅಲ್ಲದೆ, ಅರ್ಜಿ ಸಂಬಂಧದ ತೀರ್ಪನ್ನು ಕಾಯ್ದಿರಿತು.
ಇದನ್ನೂ ಓದಿ: DK Shivakumar Case: ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್, ಸಿಬಿಐಗೆ ಮತ್ತೆ ನಿರಾಸೆ
ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆರಂಭದಲ್ಲಿ ಫೆ.24 ರ ವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿತ್ತು. ನಂತರ ಹಲವು ಬಾರಿ ಮಧ್ಯಂತರ ತಡೆ ವಿಸ್ತಣೆಯಾಗಿತ್ತು.
ಏನಿದು ಪ್ರಕರಣ?
ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಅಲ್ಲದೆ, 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ, 2020ರ ಅಕ್ಟೋಬರ್ 5 ರಂದು ದೆಹಲಿ, ಮುಂಬೈ ಸೇರಿದಂತೆ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ಒಟ್ಟು 14 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿತ್ತು.
ಸಿಬಿಐ ದಾಳಿ ವೇಳೇ ಕಂಪ್ಯೂಟರ್ ಹಾರ್ಡ್ಡಿಸ್ಕ್ ಹಾಗೂ 57 ಲಕ್ಷ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದರ ಮಧ್ಯೆ, ಜಾರಿ ನಿರ್ದೇಶನಾಲಯವು ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಆರಂಭಿಸಿತ್ತು. ಅದರಂತೆ, ಡಿ.ಕೆ.ಶಿವಕುಮಾರ್ ಹಲವು ಬಾರಿ ದೆಹಲಿಗೆ ತೆರಳಿ ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಜೈಲಿಗೂ ಹೋಗಿ ಜಾಮೀನು ಮೇಲೆ ಬಿಡುಗಡೆಯಾಗಿ ಹೊರಬಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:17 pm, Mon, 31 July 23