ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್‌ ಆಗಬಾರದು: ಹೈಕೋರ್ಟ್ ಖಡಕ್ ಆದೇಶ!

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕೆಮರಾಗಳು ಒಂದು ನಿಮಿಷವೂ ಬಂದ್ ಆಗಬಾರದು ಎಂದು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ವೈಟ್‌ಫೀಲ್ಡ್ ಠಾಣೆ ಪ್ರಕರಣದ ವಿಚಾರಣೆ ವೇಳೆ ಪೊಲೀಸರ ಬೇಜವಾಬ್ದಾರಿ ಉತ್ತರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶಿಸಿದೆ.

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್‌ ಆಗಬಾರದು: ಹೈಕೋರ್ಟ್ ಖಡಕ್ ಆದೇಶ!
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್‌ ಆಗಬಾರದು
Edited By:

Updated on: Aug 22, 2026 | 10:31 AM

ಮುಖ್ಯಾಂಶಗಳು

  • ಪೊಲೀಸ್ ಠಾಣೆಗಳಲ್ಲಿ 24 ಗಂಟೆಯೂ ಸಿಸಿಟಿವಿ ಕಾರ್ಯನಿರ್ವಹಿಸುವುದು ಕಡ್ಡಾಯ ಎಂದು ಹೈಕೋರ್ಟ್ ಆದೇಶಿಸಿದೆ.
  • ಸಿಸಿಟಿವಿ ರಿಯಲ್-ಟೈಮ್ ಮಾನಿಟರ್ ಮಾಡಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.
  • ವೈಟ್‌ಫೀಲ್ಡ್ ಠಾಣೆಯ ಜವಾಬ್ದಾರಿ ರಹಿತ ಉತ್ತರದ ವಿರುದ್ಧ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು, ಆಗಸ್ಟ್ 22: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು ಮತ್ತು ಒಂದು ನಿಮಿಷವೂ ಆಫ್ ಆಗಬಾರದು ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ನೀಡಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಕಿರುಕುಳ ಆರೋಪ ಪ್ರಕರಣದಲ್ಲಿ ಕಳೆದ 11 ತಿಂಗಳಿನಿಂದ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದಿದ್ದ ಪೊಲೀಸರ ಬೇಜವಾಬ್ದಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇದು ಇಲಾಖೆಯ ವಿಶ್ವಾಸಾರ್ಹತೆಯನ್ನು ಕುಗ್ಗಿಸುತ್ತದೆ ಎಂದಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಠಾಣೆಗಳ ಸಿಸಿಟಿವಿಯನ್ನು ಕಡ್ಡಾಯವಾಗಿ ಲೈವ್ ಟ್ರ್ಯಾಕ್ ಮಾಡಲು ನಿರ್ದೇಶಿಸಿದೆ.

ವೈಟ್‌ಫೀಲ್ಡ್ ಪೊಲೀಸರ ವಿರುದ್ಧದ ದೂರು ಮತ್ತು ತನಿಖೆ

ವೈಟ್‌ಫೀಲ್ಡ್ ಪೊಲೀಸ್ ಠಾಣೆ ಸಿಬ್ಬಂದಿಯಿಂದ ತಮಗೆ ಕಿರುಕುಳವಾಗಿದೆ ಎಂದು ಆರೋಪಿಸಿ ಶೈಲಜಾ ಎಂಬ ಮಹಿಳೆ ನ್ಯಾಯಾಲಯದ ಬಾಗಿಲು ತಟ್ಟಿದ್ದರು. ಈ ಪ್ರಕರಣದ ತನಿಖೆ ವೇಳೆ, ಕಳೆದ 11 ತಿಂಗಳಿನಿಂದ ಠಾಣೆಯಲ್ಲಿ ಯುಪಿಎಸ್ (UPS) ಸಮಸ್ಯೆ ಇದ್ದು, ಸಿಸಿಟಿವಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಇದನ್ನು ತೀವ್ರವಾಗಿ ಖಂಡಿಸಿದ ಹೈಕೋರ್ಟ್, “ಪೊಲೀಸರ ಈ ಉತ್ತರ ಸಾರ್ವಜನಿಕರಲ್ಲಿ ಇಲಾಖೆಯ ಮೇಲಿರುವ ವಿಶ್ವಾಸಾರ್ಹತೆಯನ್ನು ಕುಸಿಯುವಂತೆ ಮಾಡುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿತು.

ಸುಪ್ರೀಂ ಕೋರ್ಟ್ ಆದೇಶ ಕಡ್ಡಾಯ ಪಾಲನೆಗೆ ಸೂಚನೆ

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಕೆ ಹಾಗೂ ಅವು ಸದಾ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವ ವಿಷಯದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ರಾಜ್ಯ ಉನ್ನತ ನ್ಯಾಯಾಲಯ ತಿಳಿಸಿದೆ. ರಾಜ್ಯಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ರಿಯಲ್-ಟೈಮ್‌ನಲ್ಲಿ ರೆಕಾರ್ಡ್ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಡಿಜಿ-ಐಜಿಪಿ ಕಚೇರಿಯಿಂದಲೇ ಲೈವ್ ಮಾನಿಟರ್ ಮಾಡುವ ವ್ಯವಸ್ಥೆ ರೂಪುಗೊಳ್ಳಬೇಕು ಎಂದು ನಿರ್ದೇಶಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 am, Sat, 22 August 26

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us