ಜನಿವಾರ ಜಟಾಪಟಿ: ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ದೂರು ನೀಡಿ, ಕಾಲೇಜು ಪರವಾನಗಿ ರದ್ದುಪಡಿಸಿ 25 ಲಕ್ಷ ರೂ.ದಂಡ ವಿಧಿಸಲು ಆಗ್ರಹಿಸಿದೆ. ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಬ್ರಾಹ್ಮಣ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದೆ.

ಜನಿವಾರ ಜಟಾಪಟಿ: ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ
ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ
Edited By:

Updated on: Apr 25, 2026 | 11:10 AM

ಬೆಂಗಳೂರು, ಏಪ್ರಿಲ್ 25: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ (Janivara Row) ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಲಾಗಿದೆ. ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಲಾಗಿದೆ.

ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದ ಮಹಾಸಭಾ

ರಾಜ್ಯದಲ್ಲಿ ಜನಿವಾರದ ಜಟಾಪಟಿ ತೀವ್ರವಾಗಿದ್ದು, ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ.

ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ. 2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದೆ ಎಂಬುದಾಗಿ ಆರೋಪಿಸಲಾಗಿದೆ. ಈ ಘಟನೆ ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದು ಮಹಾಸಭಾ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ

ಚಿಕ್ಕಬಳ್ಳಾಪುರದಲ್ಲಿಯೂ ಇಂತದ್ದೇ ಘಟನೆ

ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅಲ್ಲಿ ಸಹ ಹೋರಾಟ ನಡೆಯುತ್ತಿದೆ ಎಂದು ರಘುನಾಥ್ ತಿಳಿಸಿದ್ದಾರೆ. ಪ್ರಕರಣದ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲು ವಿಳಂಬವಾಗುತ್ತಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಘಟನೆಗೆ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಮಹಾಸಭಾ ಎಚ್ಚರಿಕೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us