NOC ಇಲ್ಲದಿದ್ರೂ ಚಿನ್ನಸ್ವಾಮಿ ಸ್ಟೇಡಿಯಂಗೆ ಕರೆಂಟ್ ಕೊಟ್ಟಿದ್ದಕ್ಕೆ ಹೈಕೋರ್ಟ್ ಅಸಮಾಧಾನ
ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಈ ಬೆನ್ನಲ್ಲೇ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬೆಸ್ಕಾಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನೋಟಿಸ್ ನೀಡಿದೆ. ನೋಟಿಸ್ ನೀಡಲು ಕಾರಣವೇನು? ಇಲ್ಲಿದೆ ವಿವರ

ಬೆಂಗಳೂರು, ಜೂನ್ 30: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (M Chinnaswamy Stadium) ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ ಬೆಸ್ಕಾಂ (BESCOM) ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅಗ್ನಿ ಸುರಕ್ಷತಾ ಎನ್ಒಸಿ ಇಲ್ಲವೆಂದು ಬೆಸ್ಕಾಂ ಜೂ.16 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿತ್ತು. ಬೆಸ್ಕಾಂನ ಈ ಕ್ರಮವನ್ನು ಪ್ರಶ್ನಿಸಿ ಕೆಎಸ್ಸಿಎ ಅರ್ಜಿ ಸಲ್ಲಿಸಿದೆ. “ಅಗ್ನಿ ಮತ್ತು ತುರ್ತು ಸೇವೆಗಳ ಡಿಜಿಪಿಯವರು ನೀಡಿದ್ದ ನಿರ್ದೇಶನಗಳ ಪಾಲನೆಗೆ ಕ್ರಮ ಕೈಗೊಳ್ಳಲಾಗಿದೆ. ಆದರೂ, ಕೆಎಸ್ಸಿಎ ನೀಡಿದ ಉತ್ತರ ಪರಿಗಣಿಸದೆ ವಿದ್ಯುತ್ ಕಡಿತ ಮಾಡಲಾಗಿದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎನ್ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ಈಗಾಗಲೇ ಆಗಿರುವ ಅನಾಹುತವೇ ಸಾಕಷ್ಟಾಗಿದೆ. ಮುಂದೆ ಅನಾಹುತವಾದರೆ ಅದಕ್ಕೆ ಯಾರು ಹೊಣೆ? ಪ್ರಭಾವಿಗಳು ಹೇಳಿದಾಕ್ಷಣ ಸಂಪರ್ಕ ನೀಡಿದರೆ ಸಹಿಸುವುದಿಲ್ಲ ಎಂದು ನ್ಯಾ. ಸುನೀಲ್ ದತ್ ಯಾದಬ್ ಅವರಿದ್ದ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿ, ರಾಜ್ಯ ಸರ್ಕಾರ, ಬೆಸ್ಕಾಂ, ಅಗ್ನಿ ಮತ್ತು ತುರ್ತು ಸೇವೆಗಳ ಡಿಜಿಪಿಗೆ ನೋಟಿಸ್ ನೀಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ
ಇದೇ ತಿಂಗಳು ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಿದ್ದರು. ಈ ವೇಳೆ, ಕ್ರೀಡಾಂಗಣದ ಹೊರಗೆ ನೂಕುನುಗ್ಗಲು ಸಂಭವಿಸಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಗಾಯಾಳುಗಳು ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. ಇನ್ನು ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.
ಪಿಐಎಲ್ ದಾಖಲಿಸಿಕೊಂಡ ಕೋರ್ಟ್
ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದೆ. ಸರ್ಕಾರ ಈಗಾಗಲೇ ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಸರ್ಕಾರ ಪ್ರಕರಣ ಸಂಬಂಧ ಈ ವರೆಗೆ ಕೈಗೊಂಡ ಕ್ರಮದ ವರದಿ ಸಲ್ಲಿಸಿದೆ.ಈ ಪ್ರಕರಣದಲ್ಲಿ ಕೋರ್ಟ್ ಅಮೈಕಸ್ ಕ್ಯೂರಿ ನೇಮಿಸಿದೆ.
ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಅಮೈಕಸ್ ಕ್ಯೂರಿ ನೇಮಿಸಿದ ಕೋರ್ಟ್, ಹೀಗಂದ್ರೇನು?
ಐವರು ಅಧಿಕಾರಿಗಳ ಅಮಾನತು
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಜೂನ್ 05) ರಾತ್ರಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ , ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಹೆಚ್.ಟಿ.ಶೇಖರ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಹೆಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್.ಎ.ಕೆ ಅವರನ್ನು ಅಮಾನತು ಮಾಡಲಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:45 pm, Mon, 30 June 25







