ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರವಾಗಿ ಪ್ರಧಾನಿಗೆ ಪತ್ರ: ಸಿಎಂ ಡಿ.ಕೆ. ಶಿವಕುಮಾರ್
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳ ನಿರ್ಧಾರವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ವಿಚಾರದಲ್ಲಿ ಹಿಂದೆ ಇದ್ದವರನ್ನು ದೂಷಿಸುವುದರಲ್ಲಿ ಅರ್ಥವಿಲ್ಲ.ಬೇರೆ ಕೆಲವು ರಾಜ್ಯಗಳಲ್ಲಿ ಈ ಬಗ್ಗೆ ತೀರ್ಮಾನವಾಗಿದ್ದು, ತಮಿಳುನಾಡಿನಲ್ಲಿ 69% ಮೀಸಲಾತಿ ಇದೆ. 50% ಮಿಸಲಾತಿಗಿಂತ ನಾವು ಕೇವಲ 6% ವಿಸ್ತರಣೆಗೆ ಮನವಿ ಮಾಡುತ್ತಿದ್ದೇವೆ ಎಂದವರು ಹೇಳಿದ್ದಾರೆ.

ಬೆಂಗಳೂರು, ನವೆಂಬರ್ 12: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ತೀರ್ಮಾನವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲಾಗುವುದು. ಮೋದಿ ಭೇಟಿ ಸಾಧ್ಯವಾದರೆ ಈ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ /ಟಿ.ಎಸ್.ಪಿ ಕಾರ್ಯಕ್ರಮಗಳ 2026-27 ನೇ ಸಾಲಿನ ಕ್ರಿಯಾ ಯೋಜನೆ ಕುರಿತಾದ ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಹಲವು ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ಬೆಳಿಗ್ಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶಾಸಕರು, ಸಚಿವರು, ವಿವಿಧ ನಿಗಮಗಳ ಅಧ್ಯಕ್ಷರುಗಳನ್ನು ಒಳಗೊಂಡಂತೆ ಸಭೆ ನಡೆಸಲಾಗಿದೆ. ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಯಾರು ರಾಜ್ಯದ ಪರವಾಗಿ ವಾದ ಮಾಡಬೇಕು ಎಂಬ ಬಗ್ಗೆ ಮತ್ತು ಈ ಪ್ರಕರಣದ ಮೇಲ್ವಿಚಾರಣೆಗೆ ಡಿಸಿಎಂ ಪರಮೇಶ್ವರ್, ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿ ಹೈಕೋರ್ಟ್ ಆದೇಶ
‘ಹಿಂದೆ ಇದ್ದವರನ್ನು ದೂಷಿಸುವುದರಲ್ಲಿ ಅರ್ಥವಿಲ್ಲ’
ಈ ವಿಚಾರದಲ್ಲಿ ಹಿಂದೆ ಇದ್ದವರನ್ನು ದೂಷಿಸುವುದರಲ್ಲಿ ಅರ್ಥವಿಲ್ಲ.ಬೇರೆ ಕೆಲವು ರಾಜ್ಯಗಳಲ್ಲಿ ಈ ಬಗ್ಗೆ ತೀರ್ಮಾನವಾಗಿದ್ದು, ತಮಿಳುನಾಡಿನಲ್ಲಿ 69% ಮೀಸಲಾತಿ ಇದೆ. 50% ಮಿಸಲಾತಿಗಿಂತ ನಾವು ಕೇವಲ 6% ವಿಸ್ತರಣೆಗೆ ಮನವಿ ಮಾಡುತ್ತಿದ್ದೇವೆ. ಈಗಾಗಲೇ ಒಳಮೀಸಲಾತಿ ಸಮಸ್ಯೆಯನ್ನು ಬಗೆಹರಿಸಿದ್ದು, ಮುಂದಿನ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಬಜೆಟ್ನಲ್ಲಿ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದುಸಮುದಾಯಗಳ ನಾಯಕರ ಜೊತೆ ಚರ್ಚಿಸಲಾಗಿದೆ. ಈ ವರ್ಗದ ಕಲ್ಯಾಣಕ್ಕೆ ಯಾವ ರೀತಿ ಹೊಸ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತೀರ್ಮಾನಿಸಲು ವಿಷನ್ ಗ್ರೂಪ್ ರಚಿಸುವುದಾಗಿ ಸಿಎಂ ಹೇಳಿದ್ದಾರೆ.
ಪರಮೇಶ್ವರ್ ಅವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದ್ದು, ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಿದ್ಧತೆ ಮಾಡಲಾಗುತ್ತಿದೆ. ಕೆಲವು ಯೋಜನೆಗಳು ಓವರ್ ಲ್ಯಾಪಿಂಗ್ ಆಗುತ್ತಿರುವ ಬಗ್ಗೆ ನಮ್ಮ ನಾಯಕರು ಗಮನಸೆಳೆದಿದ್ದಾರೆ. ಇಷ್ಟು ವರ್ಷಗಳ ಕಾಲ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಮೂಲಕ ನೀಡಿರುವ ಅನುದಾನ ಯಾವ ರೀತಿ ಪರಿಣಾಮ ಬೀರಿದೆ ಎಂದು ಅಧ್ಯಯನ ಮಾಡಲು ಪ್ರತಿಷ್ಠಿತ ಸಂಸ್ಥೆಗಳಿಂದ ಸಾಮಾಜಿಕ ಆಡಿಟ್ ಮಾಡಿಸಲು ತೀರ್ಮಾನಿಸಲಾಗಿದೆ. ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಮೂಲಕ 2025-26ನೇ ಸಾಲಿನಲ್ಲಿನ 42,503 ಕೋಟಿ ಹಾಗೂ ಪ್ರಸಕ್ತ ಸಾಲಿನ 44,631 ಕೋಟಿಯನ್ನು 34 ಇಲಾಖೆಗಳ 451 ಯೋಜನೆಗಳಿಗೆ ಹಂಚಿಕೆ ಮಾಡಲಾಗಿದೆ. ನಮ್ಮ ಶಾಸಕರು ಹಾಗೂ ಸಚಿವರು ಹೊಸ ಆಲೋಚನೆ, ಯೋಜನೆಗಳ ಬಗ್ಗೆ ಸಲಹೆ ನೀಡುತ್ತಿದ್ದಾರೆ ಎಂದೂ ಡಿಕೆಶಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ-ಪಂಗಡಗಳ ಸಮಾವೇಶಕ್ಕೆ ನಿರ್ಧಾರ
ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯ 44,631 ಕೋಟಿ ಸರಿಯಾದ ರೀತಿಯಲ್ಲಿ ಸೇರಬೇಕು ಎಂಬುದು ನಮ್ಮ ಸರ್ಕಾರದ ಚಿಂತನೆಯಾಗಿದ್ದು, ಇದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಬ್ಯಾಕ್ ಲಾಗ್ ಹುದ್ದೆ ನೇಮಕಾತಿ ಸಂಬಂಧವೂ ಚರ್ಚೆ ನಡೆಸಲಾಗಿದ್ದು, ಸಮಿತಿ ರಚಿಸಿ ವರದಿ ಪಡೆದು ಕಾರ್ಯರೂಪಕ್ಕೆ ತರಲಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಾವೇಶ ಮಾಡಲು ಸರ್ಕಾರ ತೀರ್ಮಾನಿಸಿದ್ದು, ನಮ್ಮ ನಾಯಕರು ಚರ್ಚೆ ಮಾಡಿ ಈ ಕಾರ್ಯಕ್ರಮ ಎಲ್ಲಿ ನಡೆಯಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಿದೆ. ಇದು ಐಕ್ಯತಾ ಸಮಾವೇಶವಾಗಿದ್ದು, ನಾವು ಚುನಾವಣೆಗೂ ಮುನ್ನ ಏನು ಮಾತು ನೀಡಿದ್ದೆವು, ನಾವು ಏನೆಲ್ಲಾ ಈಡೇರಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅದನ್ನು ಮಾಡುತ್ತೇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
