Gurulingaswamy Holimath: ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ

CM Media Adviser: ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆ ತಲುಪುವ ಒಳಗೆ ಪ್ರಾಣಪಕ್ಷಿ ಹಾರಿಹೋಗಿತ್ತು.

Gurulingaswamy Holimath: ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ
ಗುರುಲಿಂಗಸ್ವಾಮಿ ಹೊಳಿಮಠ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 23, 2022 | 6:47 AM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ (Gurulingaswamy holimath) ಅವರು ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ನಿಧನರಾದರು. 44 ವರ್ಷ ವಯಸ್ಸಿನ ಅವರಿಗೆ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಾಗರಬಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿದ್ದ ವಾಹನ ಆಸ್ಪತ್ರೆ ತಲುಪುವ ಒಳಗೆ ಪ್ರಾಣಪಕ್ಷಿ ಹಾರಿಹೋಗಿತ್ತು.

ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾದ ನಂತರ ಗುರುಲಿಂಗಸ್ವಾಮಿ ಅವರನ್ನು ಗೃಹ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿತ್ತು. ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಗುರುಲಿಂಗಸ್ವಾಮಿ ಅವರನ್ನು ಮಾಧ್ಯಮ ಸಂಯೋಜಕರಾಗಿ ನೇಮಿಸಿಕೊಳ್ಳಲಾಯಿತು.

ಕಳೆದ ವರ್ಷ (2021ರ) ಆಗಸ್ಟ್​ 2ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಗಸ್ಟ್​ 18, 2021ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಲಾಗಿತ್ತು. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು.

ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಗುರುಲಿಂಗಸ್ವಾಮಿ ಹೊಳಿಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು. ವಿವಿಧ ಮಾಧ್ಯಮಗಳಲ್ಲಿ 1998ರಿಂದ ಸೇವೆ ಸಲ್ಲಿಸುತ್ತಿದ್ದರು.

Published On - 11:35 am, Mon, 22 August 22