ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ: ಜಾತಿ ಗಣತಿಯಿಂದ ಉಪನ್ಯಾಸಕರಿಗೆ ವಿನಾಯ್ತಿ
ಅಕ್ಟೋಬರ್ 12ರಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯಲಿರುವ ಕಾರಣ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ. ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಅಕ್ಟೋಬರ್ 07: ರಾಜ್ಯ ಸರ್ಕಾರ ನಡೆಸುತ್ತಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ (Caste Census) ಭಾಗಿಯಾಗಿದ್ದ ಮೂವರು ಶಿಕ್ಷಕರು ಬೇರೆ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದು, ಮೃತ ಶಿಕ್ಷಕರ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ ಮತ್ತು ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂಬ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.
‘ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ’
ಸೆಪ್ಟೆಂಬರ್ 2ರಿಂದ ರಾಜ್ಯದಲ್ಲಿ ಶುರುವಾದ ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳದಲ್ಲಿ ಶೇ.97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.67ರಷ್ಟು ಆಗಿದೆ. 1 ಲಕ್ಷದ 20 ಸಾವಿರ ಶಿಕ್ಷಕರು ಸೇರಿ 1 ಲಕ್ಷದ 60 ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಅಕ್ಟೋಬರ್ 12ರಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯಲಿರುವ ಕಾರಣ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಜಾತಿಗಣತಿ ಸಮೀಕ್ಷೆ: ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ವಿಸ್ತರಣೆ, ಎಲ್ಲಿಯವರೆಗೆ?
‘ಬೆಂಗಳೂರಲ್ಲಿ ದಿನಕ್ಕೆ 10-15 ಮನೆಗಳ ಸಮೀಕ್ಷೆ’
ಬೆಂಗಳೂರು ನಗರದಲ್ಲಿ 46 ಲಕ್ಷ ಮನೆಗಳಿದ್ದು, 6,700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ನರಕ ಚತುರ್ದಷಿ ಒಳಗೆ ಇಲ್ಲಿ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಹೀಗಾಗಿ ಈ ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




