ಮುಡಾ ಹಗರಣ: ಇಡಿಯಿಂದ 300 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ 142 ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ನೋಂದಾಯಿತ ಆಸ್ತಿಗಳ ಮೇಲೆ ಪಿಎಂಎಲ್‌ಎ ಕಾಯ್ದೆಯಡಿ ಈ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ.
ಬೆಂಗಳೂರು, ಜನವರಿ 17: ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (muda) ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಚುರುಕುಗೊಳಿಸಿದೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಖುದ್ದು ಜಾರಿ ನಿರ್ದೇಶನಾಲಯವೇ ಟ್ವಿಟ್ಟರ್ ಎಕ್ಸ್ನಲ್ಲಿ ಮಾಹಿತಿ ನೀಡಿದೆ.
ಮುಡಾ ಸೈಟ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್‌ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅವರ ದೂರಿನನ್ವಯ ತನಿಖೆ ನಡೆಸಿದ್ದ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.
ಜಾರಿ ನಿರ್ದೇಶನಾಲಯ ಟ್ವೀಟ್
ED, Bangalore has provisionally attached 142 immovable properties having market value of Rs. 300 Crore (approx.) registered in the name of various individuals who are working as real-estate businessmen and agents under the provisions of the PMLA, 2002, in connection with the case…
— ED (@dir_ed) January 17, 2025
ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇಡಿ, ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ರೂ. 300 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು 1860 ರ ಐಪಿಸಿಯ ವಿವಿಧ ಸೆಕ್ಷನ್ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿದೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಭೂಮಿಯನ್ನು ಮೂಲತಃ ಮುಡಾ ರೂ.3,24,700 ಗೆ ಸ್ವಾಧೀನಪಡಿಸಿಕೊಂಡಿತು. ಪ್ರದೇಶದಲ್ಲಿ 14 ನಿವೇಶನಗಳ ರೂಪದಲ್ಲಿ ಪರಿಹಾರವು ರೂ. 56 ಕೋಟಿ (ಅಂದಾಜು) ಮೌಲ್ಯದ್ದಾಗಿದೆ. ಬಿ.ಎಂ. ಪಾರ್ವತಿ ಅವರಿಗೆ ಅಕ್ರಮ ಪರಿಹಾರ ನಿವೇಶನ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಪಾತ್ರ ಪ್ರಮುಖ ಪಾತ್ರ ವಹಿಸಿದೆ. ತನಿಖೆಯ ಸಮಯದಲ್ಲಿ ಬಿ.ಎಂ. ಪಾರ್ವತಿ ಅವರಿಗೆ ಹಂಚಿಕೆಯಾದ 14 ನಿವೇಶನಗಳನ್ನು ಹೊರತುಪಡಿಸಿ ಹೆಚ್ಚಿನ ಸಂಖ್ಯೆಯ ನಿವೇಶನಗಳನ್ನು ಮುಡಾ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಪರಿಹಾರವಾಗಿ ಅಕ್ರಮವಾಗಿ ಹಂಚಿಕೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಅವರು ಈ ನಿವೇಶನಗಳನ್ನು ಭಾರಿ ಲಾಭಕ್ಕೆ ಮಾರಾಟ ಮಾಡಿದ್ದಾರೆ ಲೆಕ್ಕವಿಲ್ಲದಷ್ಟು ಹಣವನ್ನು ಗಳಿಸಿದ್ದಾರೆ. ಹೀಗೆ ಗಳಿಸಿದ ಲಾಭವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಲಾಗಿದೆ.
ಇದನ್ನೂ ಓದಿ: ಮುಡಾ ಹಗರಣ: ಲೋಕಾಯುಕ್ತಗೆ ಇಡಿ ಬರೆದ ಪತ್ರದಲ್ಲೇನಿದೆ? ಅದು ಸಿಎಂಗೆ ಹೇಗೆ ಸಂಕಷ್ಟ?
ಪ್ರಭಾವಿ ವ್ಯಕ್ತಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಬೇನಾಮಿಗಳು, ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಹಿರಂಗವಾಗಿದೆ. ಆಗಿನ ಮುಡಾ ಅಧ್ಯಕ್ಷರು ಮತ್ತು ಮುಡಾ ಆಯುಕ್ತರಿಗೆ ಸ್ಥಿರ ಆಸ್ತಿ, ಮುಡಾ ನಿವೇಶನಗಳು ನಗದು ಇತ್ಯಾದಿಗಳ ರೂಪದಲ್ಲಿ ಅಕ್ರಮವಾಗಿ ಪಾವತಿಸಿದ ಬಗ್ಗೆ ಆಪಾದಿತ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೀಗೆ ಪಡೆದ ಅಕ್ರಮ ಸಂಭಾವನೆಯನ್ನು ಮತ್ತಷ್ಟು ಅಕ್ರಮವಾಗಿ ವರ್ಗಾಯಿಸಲಾಗಿದೆ. ಅದನ್ನು ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಲಾಗಿದೆ. ಮುಡಾದ ಹಿಂದಿನ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಅವರ ಸಂಬಂಧಿಕರ ಹೆಸರಿನಲ್ಲಿ ಆಸ್ತಿ, ಐಷಾರಾಮಿ ವಾಹನಗಳು ಇತ್ಯಾದಿಗಳನ್ನು ಖರೀದಿಸಲು ಸಹಕಾರಿ ಸಂಘದ ಮೂಲಕ ಹಣವನ್ನು ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಮತ್ತೊಂದು ಜಯವೆಂದ ಸ್ನೇಹಮಯಿಕೃಷ್ಣ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದವರು 300 ಕೋಟಿ ರೂ. ಬೆಲೆ ಬಾಳುವ 142 ಸ್ವತ್ತುಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಿಮ್ಮಗಳ ಹಾರೈಕೆಯಿಂದ ನನ್ನ ಹೋರಾಟಕ್ಕೆ ದೊರೆತ ಮತ್ತೊಂದು ಜಯ ಎಂದು ಸ್ನೇಹಮಯಿಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:47 pm, Fri, 17 January 25