ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ: ಸಿಎಂ ಮನೆಗೆ ಬಿಗಿ ಭದ್ರತೆ
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಆತ್ಮಹತ್ಯೆಗೆ ಪ್ರೇರಣೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಆತ್ಮಹತ್ಯೆಗೆ ಪ್ರೇರಣೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕರು ಈ ಮೊದಲೇ ಘೋಷಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿದೆ. ಭದ್ರತೆಗೆ 250ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಭವನದಿಂದ ಸಿಎಂ ಸರ್ಕಾರಿ ನಿವಾಸದವರೆಗೆ ಱಲಿ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. ರೇಸ್ ವ್ಯೂ ಸರ್ಕಲ್ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಅಂಬೇಡ್ಕರ್ ಫೋಟೋಗೆ ಪುಷ್ಪ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಜಾತಾ ಆರಂಭಿಸಿದರು.
ಸಂತೋಷ್ ಹುಟ್ಟೂರಿಗೆ ಇಂದು ಕಾಂಗ್ರೆಸ್ ನಾಯಕರು ಭೇಟಿ ನೀಡುವ ಸಾಧ್ಯತೆಯಿದೆ. ವಿಶೇಷ ವಿಮಾನದಲ್ಲಿ ಬೆಳಗಾವಿಗೆ ತೆರಳುವ ನಾಯಕರು ಸಂತೋಷ್ ಕುಟುಂಬಕ್ಕೆ ₹ 11 ಲಕ್ಷ ಪರಿಹಾರ ನೀಡಿ ಸಾಂತ್ವನ ಹೇಳಲಿದ್ದಾರೆ ಎಂದು ಮೂಲಗಳು ಹೇಳಿವೆ.
ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಗೊಳಿಸಿ, ಬಂಧಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಳಪಾಡ್ ನೇತೃತ್ವದಲ್ಲಿ ನಿನ್ನೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ, ಈಶ್ವರಪ್ಪ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಇದನ್ನೂ ಓದಿ: ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಷಡ್ಯಂತ್ರದ ಬಗ್ಗೆ ತನಿಖೆ ಆಗಬೇಕು: ಕೆಎಸ್ ಈಶ್ವರಪ್ಪ