ಎಸ್‌. ನಿಜಲಿಂಗಪ್ಪ ಮನೆ ಸ್ವಾಧೀನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ಮುಖಂಡ ಮೋಹನ್‌ ಕುಮಾರ್‌ ಕೊಂಡಜ್ಜಿ

| Updated By: ಆಯೇಷಾ ಬಾನು

Updated on: Aug 09, 2023 | 9:46 AM

ಚಿತ್ರದುರ್ಗದಲ್ಲಿರುವ ನಿಜಲಿಂಗಪ್ಪ ಅವರ ಮನೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದುಕೊಂಡು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೋಹನ್‌ ಕುಮಾರ್‌ ಕೊಂಡಜ್ಜಿ ಮನವಿ ಪತ್ರ ಸಲ್ಲಿಸಿದರು.

ಎಸ್‌. ನಿಜಲಿಂಗಪ್ಪ ಮನೆ ಸ್ವಾಧೀನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ಮುಖಂಡ ಮೋಹನ್‌ ಕುಮಾರ್‌ ಕೊಂಡಜ್ಜಿ
ಎಸ್‌. ನಿಜಲಿಂಗಪ್ಪ ಮನೆ
Follow us on

ಬೆಂಗಳೂರು, ಆ.09: ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ(S Nijalingappa) ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದುಕೊಂಡು ಅದನ್ನು ಸಂರಕ್ಷಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕಾಂಗ್ರೆಸ್‌ ಮುಖಂಡ ಮೋಹನ್‌ ಕುಮಾರ್‌ ಕೊಂಡಜ್ಜಿ(Congress MLC Mohan Kondajji) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ 22ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನಿಜಲಿಂಗಪ್ಪ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮಾಲಾರ್ಪಣೆ ಮಾಡಿದರು. ಈ ವೇಳೆ ಚಿತ್ರದುರ್ಗದಲ್ಲಿರುವ ನಿಜಲಿಂಗಪ್ಪ ಅವರ ಮನೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದುಕೊಂಡು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೋಹನ್‌ ಕುಮಾರ್‌ ಕೊಂಡಜ್ಜಿ ಮನವಿ ಪತ್ರ ಸಲ್ಲಿಸಿದರು. ಹಾಗೂ ಮಾಜಿ ಮುಖ್ಯಮಂತ್ರಿಯ ಮನೆಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ವಿಳಂಬ ಆಗಿರುವುದನ್ನು ಗಮನಕ್ಕೆ ತಂದರು.

ಇದನ್ನೂ ಓದಿ: ದಾವಣಗೆರೆ: ಪಾಳುಕೊಂಪೆಯಂತಾದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಓದಿದ ಶಾಲೆ

‘ನಿಜಲಿಂಗಪ್ಪ ಅವರ ಮನೆಯನ್ನು ಸಂರಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ನಾಲ್ಕು ವರ್ಷಗಳಾದರೂ ಈ ಆದೇಶ ಕಾರ್ಯರೂಪಕ್ಕೆ ಬಂದಿಲ್ಲ. ಮನೆಯನ್ನು ಸರ್ಕಾರದ ವಶಕ್ಕೆ ಪಡೆಯುವುದಕ್ಕಾಗಿ ನಿಜಲಿಂಗಪ್ಪ ಅವರ ವಾರಸುದಾರರಾದ ಮೊಮ್ಮಗ ವಿನಯ್‌ ಮತ್ತು ಕಿರಣ್‌ ಶಂಕರ್‌ ಅವರನ್ನು ಚಿತ್ರದುರ್ಗದ ಹಿಂದಿನ ಜಿಲ್ಲಾಧಿಕಾರಿ ಅಮೆರಿಕದಿಂದ ಕರೆಸಿಕೊಂಡಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಆಸ್ತಿಯನ್ನು ಸರ್ಕಾರದ ಸ್ವಾಧೀನಕ್ಕೆ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಮನವಿ ಪತ್ರದಲ್ಲಿ ಮೋಹನ್‌ ಕುಮಾರ್‌ ಕೊಂಡಜ್ಜಿ ದೂರಿದ್ದಾರೆ.

ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ನಿಜಲಿಂಗಪ್ಪ ಅವರ ನಿವಾಸವನ್ನು ಶೀಘ್ರವೇ ಖರೀದಿಸಿ ಕಾಮಗಾರಿ ಆರಂಭಿಸುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ನಿಜಲಿಂಗಪ್ಪ ಅವರ ಮನೆ ದುರ್ಬಲವಾಗಿದೆ ಮತ್ತು ಪುನಶ್ಚೇತನ ಕಾರ್ಯಗಳನ್ನು ಶೀಘ್ರವಾಗಿ ಪ್ರಾರಂಭಿಸದಿದ್ದರೆ ಅದು ಕುಸಿಯುವ ಆತಂಕವಿದೆ. ಈ ಎಲ್ಲ ಲೋಪಗಳನ್ನು ಸರಿಪಡಿಸಿ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಸಂರಕ್ಷಿಸಲು ಮುಖ್ಯ ಕಾರ್ಯದರ್ಶಿ ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿ ಜತೆ ಸಭೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು ಎಂದು ಮೋಹನ್‌ ಕುಮಾರ್‌ ಕೊಂಡಜ್ಜಿ ಆಗ್ರಹಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ