ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗೆ ಆದೇಶ ನೀಡಿದೆ.
ಕಳೆದ ವಾರ ಈ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ ಜಯಂತ್‌ಕುಮಾರ್ ಅವರು ತನಿಖೆ ನಡೆಸಿ, ನವೆಂಬರ್ 2ರ ಒಳಗೆ ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.
ಅದೇ ವೇಳೆ, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
Published On - 2:43 pm, Wed, 14 September 22