ಕರ್ನಾಟಕದಲ್ಲಿ ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ; ಜನವರಿ ಅಂತ್ಯದವರೆಗೆ ಕಠಿಣ ನಿಯಮ
ಇಂದಿನ ಸಿಎಂ ಸಭೆಯ ಶೇ. 40 ರಷ್ಟು ಭಾಗ ಮಕ್ಕಳ ಆರೋಗ್ಯದ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಪೂರ್ವ ಸಿದ್ಧತೆ ಇಲ್ಲದಿದ್ದಲ್ಲಿ ಸಮಸ್ಯೆ ಎದುರಿಸಬೇಕಾಗಬಹುದು ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ರೂಪದ ಸಲಹೆ ಕೊಟ್ಟಿದೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮಾರ್ಗಸೂಚಿ ಜನವರಿ ತಿಂಗಳಾಂತ್ಯದವರೆಗೆ ವಿಸ್ತರಿಸಿ ಆದೇಶ ನೀಡಲಾಗಿದೆ. ಮಾರ್ಗಸೂಚಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಅಧಿಕಾರಿಗಳ ಜೊತೆ ಕೊವಿಡ್ ಪರಿಸ್ಥಿತಿ ಅವಲೋಕಿಸುವ ಬಗ್ಗೆ ತುರ್ತು ಸಭೆ ನಡೆಸಿದ್ದರು. ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಅದರಂತೆ, ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಲಾಗಿದೆ. ಈಗ ಜಾರಿಯಲ್ಲಿ ಇರುವ ಕೊರೊನಾ ಮಾರ್ಗಸೂಚಿ ಜನವರಿ ತಿಂಗಳ ಅಂತ್ಯದವರೆಗೆ ಮುಂದುವರಿಯಲಿದೆ. ವೀಕೆಂಡ್ ಕರ್ಫ್ಯೂ ಬಗ್ಗೆ ಗುರುವಾರದ ಬಳಿಕ ನಿರ್ಧಾರ ಮಾಡಲಾಗುವುದು. ಪ್ರಧಾನಿ ಮೋದಿ ಸಭೆ ಬಳಿಕ ಮತ್ತೆ ಸಿಎಂ ಪ್ರತ್ಯೇಕ ಸಭೆ ನಡೆಸಿ, ಸಭೆಯಲ್ಲಿ ಚರ್ಚಿಸಿ ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಲಾಗಿದೆ.
ಇಂದಿನ ಸಿಎಂ ಸಭೆಯ ಶೇ. 40 ರಷ್ಟು ಭಾಗ ಮಕ್ಕಳ ಆರೋಗ್ಯದ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಪೂರ್ವ ಸಿದ್ಧತೆ ಇಲ್ಲದಿದ್ದಲ್ಲಿ ಸಮಸ್ಯೆ ಎದುರಿಸಬೇಕಾಗಬಹುದು ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ರೂಪದ ಸಲಹೆ ಕೊಟ್ಟಿದೆ.
ಇಂದಿನ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು ಈ ರೀತಿ ಇದೆ:
- ಕೊರೊನಾ ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ತೀರ್ಮಾನ ಮಾಡಲಾಗಿದೆ
- ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೊವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲು ಇರಿಸುವುದು
- ಕೊವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ
- ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವುದು
- ಸಾರ್ವಜನಿಕ ಸ್ಥಳಗಳಲ್ಲಿ ಕೊವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
- ಹೋಮ್ ಐಸೋಲೇಷನ್ ನಲ್ಲಿರುವ ಸೋಂಕಿತರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚನೆ ಕೊಡಲಾಗಿದೆ
- ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆ ಬಲವರ್ಧನೆ ಮಾಡುವುದು
- ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳ ಬಳಕೆ ಮಾಡುವುದು
- ಬೆಂಗಳೂರಿನಲ್ಲಿ ಕೂಡಲೇ 27 ಕೊವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭ ಮಾಡುವುದು
- ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚನೆ ನೀಡಲಾಗಿದೆ
- ಕೊವಿಡ್ ಲಸಿಕೆಯ ಎರಡೂ ಡೋಸ್ ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚನೆ ಕೊಡಲಾಗಿದೆ
- ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಳ ಮಾಡುವುದು
- ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯುವಂತಿಲ್ಲ
- ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವುದು
- ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳುವುದು
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ಹಿನ್ನೆಲೆ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಇದನ್ನೂ ಓದಿ: PM Modi: ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ, ಒಮಿಕ್ರಾನ್; ಜ.13ರಂದು ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ