ಬೆಂಗಳೂರು, ಡಿಸೆಂಬರ್ 2: ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಸಂಜೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆದರೆ ಮಂಗಳವಾರ ಸಾಧಾರಣ ಮಳೆಯಾಗಬಹುದು. ಈ ಪ್ರದೇಶಗಳಲ್ಲಿ ಬುಧವಾರದಿಂದ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು, ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಭಾನುವಾರದಿಂದ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಉಡುಪಿ, ಚಿಕ್ಕಮಗಳೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಭಾರೀ ಮಳೆ ನಿರೀಕ್ಷೆ ಇದ್ದರೆ ಆರೆಂಜ್ ಅಲರ್ಟ್ ಹಾಗೂ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಮಳೆ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ನೀಡಲಾಗುತ್ತದೆ.
ಏತನ್ಮಧ್ಯೆ, ಫೆಂಗಲ್ ಚಂಡಮಾರುತದ ಪ್ರಭಾವದಿಂದ ನಿರಂತರ ಮಳೆಯ ಹಿನ್ನೆಲೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಡಿಸೆಂಬರ್ 2 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವಾರವಿಡೀ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು ಸುಮಾರು 22 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: ಬೆಂಗಳೂರನ್ನೂ ನಡುಗಿಸುತ್ತಿದೆ ಫೆಂಗಲ್, ಎಡೆಬಿಡದೇ ಸುರಿಯುತ್ತಿದೆ ಮಳೆ: ಕರ್ನಾಟಕದಾದ್ಯಂತ ಚಂಡಮಾರುತ ಪ್ರಭಾವ
ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್‌ನಿಂದ 19 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ