Cyclone Mandous: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮುಂದುವರಿದ ಮಳೆ, ಕುಸಿದ ಉಷ್ಣಾಂಶ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 11, 2022 | 10:09 AM

Bengaluru Rains: ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಉಷ್ಣಾಂಶ ತೀವ್ರವಾಗಿ ಕುಸಿದಿದ್ದು 16 ಡಿಗ್ರಿ ಸೆಲ್ಷಿಯಸ್​ಗೆ ಬಂದಿದೆ

Cyclone Mandous: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮುಂದುವರಿದ ಮಳೆ, ಕುಸಿದ ಉಷ್ಣಾಂಶ
ಮಳೆಯಿಂದಾಗಿ ತುಮಕೂರು ನಗರದಲ್ಲಿ ಜನಸಂಚಾರ ವಿರಳವಾಗಿದೆ.
Follow us on

ಬೆಂಗಳೂರು: ಮಾಂಡೌಸ್ ಚಂಡಮಾರುತದ (Cyclone Mandous) ಅಬ್ಬರವು ಕರ್ನಾಟಕದಲ್ಲಿ ತನ್ನ ಪರಿಣಾಮ ತೋರಿಸುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ (Bengaluru Rains) ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಉಷ್ಣಾಂಶ ತೀವ್ರವಾಗಿ ಕುಸಿದಿದ್ದು 16 ಡಿಗ್ರಿ ಸೆಲ್ಷಿಯಸ್​ಗೆ ಬಂದಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ, ಬೆಂಗಳೂರಿನಲ್ಲಿ ಮಳೆ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದೆ.

ಬೆಂಗಳೂರು ನಗರ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ 24 ಗಂಟೆಗಳ‌ ಕಾಲ ಕವಿದ ವಾತಾವರಣವ ಇರಲಿದೆ. ಗಂಟೆಗೆ 65ರಿಂದ 75 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಸೋಮವಾರದವರೆಗೆ (ಡಿ 12) ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್, ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರಲಿದೆ. ಉಷ್ಣಾಂಶ ತೀವ್ರ ಪ್ರಮಾಣದಲ್ಲಿ ಕುಸಿದಿರುವುದರಿಂದ ಆರೋಗ್ಯದ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ.

ತುಮಕೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಅಟ್ಟ ಸೇರಿದ್ದ ಛತ್ರಿಗಳು ಮತ್ತೆ ಜನರ ಕೈಗೆ ಬಂದಿವೆ. ರಸ್ತೆಗಳಲ್ಲಿ ಜನಸಂಚಾರ ಕಡಿಮೆಯಾಗಿದ್ದು, ಹೂ ಮತ್ತು ತರಕಾರಿ ಮಾರುಕಟ್ಟೆ ಬಿಕೋ ಎನ್ನುತ್ತಿದೆ. ಗ್ರಾಹಕರು ಇಲ್ಲದೇ ವ್ಯಾಪಾರಿಗಳ ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಹೂಗಳನ್ನು ಸಕಾಲಕ್ಕೆ ಕೊಯ್ಲು ಮಾಡಲು ಮಾರುಕಟ್ಟೆಗೆ ತಲುಪಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಬೆಲೆಯೂ ಕುಸಿದಿದೆ. ನಿಮಿಷವೂ ಬಿಡುವು ಕೊಡದೆ ಮಳೆ ಸುರಿಯುತ್ತಿರುವುದರಿಂದ ಜನರು ಪರದಾಡುವಂತಾಗಿದೆ.

ಮಂಡ್ಯದಲ್ಲಿ ಜನಜೀವನ ಅಸ್ತವ್ಯಸ್ತ

ಮಂಡ್ಯ ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆ ಮುಂದುವರಿದಿದೆ. ಚಂಡಮಾರುತದ ಪರಿಣಾಮದಿಂದ ಉಷ್ಣಾಂಶ ತೀವ್ರಗತಿಯಲ್ಲಿ ಕುಸಿದಿದ್ದು, ಜನರು ಮನೆಗಳಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ತುಂತುರು ಮಳೆಯಲ್ಲಿಯೇ ಕೆಲವರು ಸಂಚರಿಸುತ್ತಿದ್ದಾರೆ. ನಿನ್ನೆಯಿಂದಲೂ ಕರ್ನಾಟಕದಲ್ಲಿ ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದೆ. ಹುಬ್ಬಳ್ಳಿಯಲ್ಲಿ ಮಳೆ ಮತ್ತು ಮೋಡ ಮುಸುಕಿದ ವಾತಾವರಣದಿಂದ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ಭಾರೀ ಚಳಿ, ಮಳೆ; ಮಲೆನಾಡು, ಕರಾವಳಿಯಲ್ಲಿ ಗುಡುಗು ಸಹಿತ ಮಳೆ

ಮಳೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:07 am, Sun, 11 December 22