ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ₹9.67 ಕೋಟಿ ಮೌಲ್ಯದ 27 ಕೆಜಿಗೂ ಹೆಚ್ಚು ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ವಿಮಾನಗಳಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಾದಕವಸ್ತು ಜಾಲದ ಕುರಿತು ತನಿಖೆ ತೀವ್ರಗೊಂಡಿದೆ.

ದೇವನಹಳ್ಳಿ, ಅ.20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ವಿದೇಶದಿಂದ ತರಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಪ್ರತ್ಯೇಕ ವಿಮಾನಗಳಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ.
ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಎರಡು ಪ್ರತ್ಯೇಕ ವಿಮಾನಗಳಲ್ಲಿ ಕೆಐಎಬಿಗೆ ಬಂದಿಳಿದ ಇಬ್ಬರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಅಡಗಿಸಿಡಲಾಗಿದ್ದ ಒಟ್ಟು 27 ಕೆಜಿ 600 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ ಅಂದಾಜು 9.27 ಕೋಟಿ ರೂ.ನಿಂದ 9.67 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬ್ಯಾಂಕಾಕ್‌ನಿಂದ ಬಂದ ಮೊದಲ ಪ್ರಯಾಣಿಕನ ಲಗೇಜ್ ಬ್ಯಾಗ್‌ನಿಂದ 5.43 ಕೋಟಿ ಮೌಲ್ಯದ 15.5 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ವಿಮಾನದಲ್ಲಿ ಬಂದಿದ್ದ ಎರಡನೇ ಪ್ರಯಾಣಿಕನ ಬಳಿಯಿಂದ ₹4.24 ಕೋಟಿ ಮೌಲ್ಯದ 12.1 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ವಿದೇಶದಿಂದ ಅಕ್ರಮವಾಗಿ ಮಾದಕ ದ್ರವ್ಯ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಜಾಲದ ಹಿಂದಿರುವ ಕ್ರಿಮಿನಲ್ ನೆಟ್‌ವರ್ಕ್ ಹಾಗೂ ಬೆಂಗಳೂರಿನಲ್ಲಿ ಮಾದಕ ದ್ರವ್ಯ ಯಾರಿಗೆ ತಲುಪಬೇಕಿತ್ತು ಎಂಬ ಕುರಿತು ತನಿಖೆ ಚುರುಕುಗೊಳಿಸಲಾಗಿದೆ.
ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್ನಲ್ಲಿ 5 ಕೆಜಿ ಡ್ರಗ್ಸ್ ವಶ: ಬೆಂಗಳೂರು ಸೇರಿ ದೇಶಾದ್ಯಂತ ಡಿಆರ್ಐ ಅಧಿಕಾರಿಗಳ ಕಾರ್ಯಾಚರಣೆ
ಬೆಂಗಳೂರು ಸೇರಿ ದೇಶಾದ್ಯಂತ ಡಿಆರ್ಐ ಅಧಿಕಾರಿಗಳ ಕಾರ್ಯಾಚರಣೆ
ದೇಶಾದ್ಯಂತ ಮಾದಕವಸ್ತುಗಳ ಸಾಗಾಟ ತಡೆಗಟ್ಟಲು ಆದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಇತ್ತೀಚೆಗೆ ವ್ಯಾಪಕ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಗಳು ಬೆಂಗಳೂರು, ದೆಹಲಿ ಮತ್ತು ನಾಗಪುರ ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇಂದ್ರೀಕೃತವಾಗಿದ್ದವು. ಈ ಕಾರ್ಯಾಚರಣೆಗಳಲ್ಲಿ ಒಟ್ಟು 9 ಕೆ.ಜಿಗೂ ಅಧಿಕ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) 5 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿತ್ತು. ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಕೆಜಿ ಕೊಕೇನ್ ಪತ್ತೆಯಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:41 pm, Tue, 20 October 26




