ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ತಡೆಯಾಜ್ಞೆ ಕೋರಿದ್ದ ಅರ್ಜಿ ವಿಚಾರಣೆ ಇಂದು ಅಂತ್ಯಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಸಿಬಿಐ ತನಿಖೆ ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯಗೊಂಡಿದ್ದು, ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ
Rakesh Nayak Manchi

Updated on: Apr 17, 2023 | 6:37 PM

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ (CBI) ತನಿಖೆಗೆ ತಡೆಯಾಜ್ಞೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಅಂತ್ಯಗೊಳಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ತೀರ್ಪು ಕಾಯ್ದಿರಿಸಿದೆ. ಸಿಬಿಐ ತನಿಖೆಗೆ ಸರ್ಕಾರದ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನ್ಯಾ.ಕೆ.ನಟರಾಜನ್‌ರಿದ್ದ ಹೈಕೋರ್ಟ್‌ ಪೀಠ ನಡೆಸುತ್ತಿತ್ತು. ಸದ್ಯ ಡಿ.ಕೆ.ಶಿವಕುಮಾರ್ ಹಾಗೂ ಸಿಬಿಐ ವಕೀಲರ ವಾದಮಂಡನೆ ಅಂತ್ಯಗೊಂಡಿದ್ದು, ಆದೇಶ ಕಾಯ್ದಿರಿಸಲಾಗಿದೆ. ಇದೇ ವೇಳೆ ಪೀಠವು, ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ವಿಸ್ತರಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್​ನ ಅಖಂಡ ಶ್ರೀನಿವಾಸ್ ಮೂರ್ತಿ; ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ಕಿಡಿ

ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ನಡೆದ ವಿಚಾರಣೆಗಳ ಸಮಯದಲ್ಲಿ ಕೋರ್ಟ್, ಮಾರ್ಚ್‌ 31ಕ್ಕೆ, ಏಪ್ರಿಲ್ 6ಕ್ಕೆ, ಏಪ್ರಿಲ್ 13ಕ್ಕೆ, ಏಪ್ರಿಲ್ 17ರ ವರೆಗೆ ಮಧ್ಯಂತರ ತಡೆ ವಿಸ್ತರಿಸಿತ್ತು. ಇದೀಗ ಮತ್ತೆ ವಿಸ್ತರಣೆಗೊಂಡಿದೆ, ಆದರೆ ವಿಚಾರಣೆ ಅಂತ್ಯಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಏನಿದು ಪ್ರಕರಣ?

ಡಿಕೆ ಶಿವಕುಮಾರ್‌ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು. ಈ ವೇಳೆ ಕಂಪ್ಯೂಟರ್ ಹಾರ್ಡ್​ಡಿಸ್ಕ್​ ಹಾಗೂ 57 ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನೊಂದೆಡೆ, ಜಾರಿ ನಿರ್ದೇಶನಾಲಯವು (ಇಡಿ) ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿ.ಕೆ.ಶಿವಕುಮಾರ್ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಜೈಲಿಗೆ ಹೋಗಿ ಜಾಮೀನು ಮೇಲೆ ಬಿಡುಗಡೆಯಾಗಿ ಹೊರಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Mon, 17 April 23

Loading...
Unable to load recommendations.
Follow Us