ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ
ರಾಜ್ಯ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ದೀಪಾವಳಿ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು (DA) ಶೇ. 2.25ರಷ್ಟು ಹೆಚ್ಚಿಸಿ ಮೂಲ ವೇತನದ ಶೇ. 18ಕ್ಕೆ ಪರಿಷ್ಕರಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2026ರಿಂದ ಈ ಆದೇಶ ಅನ್ವಯವಾಗಲಿದೆ.

ಬೆಂಗಳೂರು, ನವೆಂಬರ್ 05: ಸಾಲು ಸಾಲು ಬೆಲೆ ಏರಿಕೆಗಳ ನಡುವೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಶೇ.2.25 ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದ್ದು, ಜುಲೈ ತಿಂಗಳಿಂದಲೇ ಇದು ಅನ್ವಯವಾಗಲಿದೆ. ಆ ಮೂಲಕ ತುಟ್ಟಿ ಭತ್ಯೆ ಶೇ.15.75ರಿಂದ ಶೇ.18ಕ್ಕೆ ಹೆಚ್ಚಳವಾಗಿದೆ. ಈ ಕುರಿತು ಸರ್ಕಾರದ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ (ಸೇವೆಗಳು-2) ಮಂಜುನಾಥ್ ಎಸ್. ಆದೇಶಿಸಿದ್ದಾರೆ.
ಸರ್ಕಾರದ ಆದೇಶದಲ್ಲಿ ಏನಿದೆ?
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2026ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.15.75 ರಿಂದ ಶೇ.18ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2026 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇ.15.75ರಿಂದ ಶೇ.18ಕ್ಕೆ ಹೆಚ್ಚಿಸಲಾಗಿದೆ ಎಂದು ಆದೆಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್! ಹಾಲು, ಅಕ್ಕಿ ದುಬಾರಿ ಬೆನ್ನಲ್ಲೇ ಹೋಟೆಲ್‌ಗಳಲ್ಲಿ ಆಹಾರ ದರ ಶೇ 10-15 ಹೆಚ್ಚಳ
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ನಿವೃತ್ತರಾದ ನೌಕರರು ರಾಜ್ಯ ಪಿಂಚಣಿದಾರರಾಗುವುದರಿಂದ ಅವರಿಗೂ ಸಹ ಈ ಆದೇಶ ಅನ್ವಯಿಸುತ್ತದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಶ್ರೇಣಿಗಳಲ್ಲಿರುವ ಪೂರ್ಣಾವಧಿ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರೂ ಇದಕ್ಕೆ ಅರ್ಹರಾಗಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




