ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ (PSI Recruitment Scam) ನಡೆದಿದ್ದು, ಮುಂದಿನ ಆದೇಶದವರೆಗೆ 545 ಪಿಎಸ್ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮರುಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ
ಎಪ್ರಿಲ್ ತಿಂಗಳಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದಲ್ಲಿ ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಬೆಂಗಳೂರಿನ ಕೇಂದ್ರದಲ್ಲೂ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು. ಆರೋಪಿಗಳಿಗೆ ಮರು ಪರೀಕ್ಷೆಯಲ್ಲಿ ಅವಕಾಶ ಸಿಗುವುದಿಲ್ಲ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ಹೇಳಿದ್ದರು.
ಪಿಎಸ್ಐ ನೇಮಕಾತಿ ಪ್ರಕರಣ, ಅಕ್ಟೋಬರ್ನಲ್ಲಿ ಎಲ್ಲ ಪ್ರಕರಣಗಳ ಚಾರ್ಜ್ಶೀಟ್
ಕರ್ನಾಟಕದ 454 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಆಗಿರುವ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಅಕ್ಟೋಬರ್ನಲ್ಲಿ ಎಲ್ಲ ಪ್ರಕರಣಗಳಿಗೆ ಚಾರ್ಜ್ಶೀಟ್ ಹಾಕಲಾಗುವುದು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದರು. ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ ನಂತರ ಮರು ಪರೀಕ್ಷೆಯ ದಿನಾಂಕ ಘೋಷಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳ ಒಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ ಎಂದು ತಿಳಿಸಿದ್ದರು.
ಮರು ಪರೀಕ್ಷೆ ರದ್ದುಗೊಳಿಸುವಂತೆ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ, ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ
ಮರು ಪರೀಕ್ಷೆ ಯನ್ನು ಕೈಬಿಡುವಂತೆ ಒತ್ತಾಯಿಸಿ ಮೇನಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರಿಗೆ ಬೆಂಬಲ ನೀಡುವ ಸಲುವಾಗಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಕೂಡಲೇ ನಿರ್ಧಾರದಿಂದ ಹಿಂದೆಸರಿದು ಪ್ರಾಮಾಣಿಕವಾಗಿ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಪತ್ರ ನೀಡುವಂತೆ ಅಭ್ಯರ್ಥಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಭ್ಯರ್ಥಿಗಳು ಒಬ್ಬೊಬ್ಬರಾಗಿಯೇ ಫ್ರೀಡಂಪಾರ್ಕ್ಗೆ ಆಗಮಿಸಿ ಪ್ರತಿಭಟನೆ ಆರಂಭಿಸಿದ್ದು, 300ಕ್ಕೂ ಹೆಚ್ಚು ಮಂದಿ ಜಮಾಯಿಸಿದ್ದಾರೆ. ಇವರಿಗೆ ಸಮತಾ ಸೈನಿಕ ದಳ, ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಬೆಂಬಲ ಸೂಚಿಸಿದ್ದರು.
ಈಗಲೇ ಭರವಸೆ ನೀಡಲು ಸಾಧ್ಯವಿಲ್ಲ
ಮರು ಪರೀಕ್ಷೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಅಭ್ಯರ್ಥಿಗಳು ಮರು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯುವವರೆಗೂ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ತಾಳ್ಮೆಯಿಂದ ಇರಬೇಕು. ನೀವು ನೀಡಿದ ಮನವಿ ಪತ್ರವನ್ನು ನಾನು ಪರಿಶೀಲಿಸುತ್ತೇನೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:04 pm, Wed, 28 September 22