ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ

| Updated By: ರಮೇಶ್ ಬಿ. ಜವಳಗೇರಾ

Updated on: Aug 20, 2024 | 4:06 PM

ಇಂದು(ಆಗಸ್ಟ್ 20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಈ ವೇಳೆ ಅವರು ಮೂರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ
ಸಿದ್ದರಾಮಯ್ಯ
Follow us on

ಬೆಂಗಳೂರು, (ಆಗಸ್ಟ್ 20): ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್​ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಇಂದು (ಆಗಸ್ಟ್​ 20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು ಎಂದು ಹೇಳಿದರು.

98ಎ, ಬಿ ಸೆಕ್ಷನ್​​ ತಿದ್ದುಪಡಿ ಮಾಡ್ತೇನೆ ಎಂದ ಸಿಎಂ

ಹಾವನೂರು ಆಯೋಗಕ್ಕೆ ವಿರೋಧ ವ್ಯಕ್ತವಾಯ್ತು. ಆದರೂ ಜಾರಿಗೆ ಮಾಡಿದರು. ಉಳುವವನೇ ಭೂಮಿಯ ಒಡೆಯ eಂದು ದೇವರಾಜ ಅರಸು ತಿದ್ದುಪಡಿ ಮಾಡಿದ್ರು. ಬಳಿಕ ಉಳುವವನೆ ಭೂ ಸೆಕ್ಷನ್ 17a, b ತಿದ್ದುಪಡಿ ಮಾಡಿ ಜಮೀನು‌ ನೋಡದೆಯೇ ಜಮೀನು ಖರೀದಿ ಮಾಡುವ ರೀತಿ ಮಾಡಿದ್ರು. ಯಾರು ಮಾಡಿದ್ದು? ನಾವು ಸುಮ್ಮನೇ ಇದ್ದೀವಿ. ಇದನ್ನ ಗಂಭೀರವಾಗಿ ಚರ್ಚೆ ಮಾಡಬೇಕಿದೆ. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‌ಭೂಸುಧಾರಣೆ ಕಾಯ್ದೆಯನ್ನು ವಿಧಾನಪರಿಷತ್​ನಲ್ಲಿ ಬಹುಮತ ಸಿಕ್ಕಾಗ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡುತ್ತೇನೆ. 98ಎ, ಬಿ ಸೆಕ್ಷನ್​​ಗಳನ್ನು ತಿದ್ದುಪಡಿ ಮಾಡಿದ್ದನ್ನು ರದ್ದುಪಡಿಸಲಾಗುವುದು. ಅಪ್ಪರ್ ಹೌಸ್ ನಲ್ಲಿ‌ ಮೆಜಾರಿಟಿ ಬರಲಿ ಎಂದು ಕಾಯುತ್ತಿದ್ದೇನೆ. ಅವರ ತಿದ್ದುಪಡಿಯನ್ನು ಬದಲಾವಣೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ ಎಂದರು.

ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ. ಬಸವಾದಿ ಶರಣಗರು 800 ವರ್ಷಗಳ ಹಿಂದಯೇ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಆದರೆ ಸಂಪೂರ್ಣ ಸಮ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ. ಪ್ರತಿಯೊಬ್ಬರಿಗೂ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕದರೆ ಮಾತ್ರ ಜಾತಿ ವ್ಯವಸ್ಥೆ ಹೋಗಬಹುದು. ಇದಕ್ಕಾಗಿಯೇ ಅರಸು ಅವರು ದಲಿತರು, ಮಹಿಳೆಯರು, ರೈತರು, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ನೀಡಿದರು. ಮಲ ಹೊರುವ ಪದ್ಧತಿ ಸೇರಿದಂತೆ ಅನೇಕ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದರು ಎಂದು ತಿಳಿಸಿದರು.

ಎಲ್ಲರಿಗೂ ಸಮಾನ ಅವಕಾಶ ಸಿಗಲು ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿ, ಎಷ್ಟೇ ವಿರೋಧ ಇದ್ದರೂ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದರು. ಇದರಿಂದ ಹಿಂದುಳಿದ ವರ್ಗದವರಿಗೆ ಶಿಕ್ಷಣದಲ್ಲಿ ಮೀಸಲಾತಿ ಸಾಧ್ಯವಾಯಿತು. ತಳ ಸಮುದಾಯದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲಗೊಳಿಸಲು ಎಷ್ಟೇ ವಿರೋಧ ಇದ್ದರೂ, ಜಾರಿಗೊಳಿಸಿದರು. ಹಿಂದುಳಿದವರಿಗೆ ಶೇ.38 ರಷ್ಟು ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ಅರಸು ಅವರೇ ಕಾರಣ ಎಂದು ಹೇಳಿದರು.

ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದಾರೆ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾವು ಜಾತಿ ಗಣತಿ ಮಾಡಿದ್ದೇವೆ. ಜಾತಿ ಗಣತಿ ಮಾಡದೆ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ನಾವು ನಡೆಸುತ್ತಿರುವ ಪ್ರಯತ್ನಗಳಿಂದ ಹತಾಶರಾಗಿ ನನ್ನನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ಮಾಡುತ್ತಿದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ 40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ.

ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಖರ್ಚು ಮಾಡಲು ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಗೆ ತಿದ್ದುಪಡಿ ತಂದದ್ದು ನಮ್ಮ ಸರ್ಕಾರ. ಕೇಂದ್ರದಲ್ಲಿ ಈ ರೀತಿಯ ಕಾಯ್ದೆಯನ್ನು ಜಾರಿಗೆ ತರದೇ ಇಲ್ಲಿ ಅನುಷ್ಠಾನದ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಈ ರೀತಿ ಟೀಕಿಸಲು ಅವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ ಎಂದರು.

ಕರ್ನಾಟಕ ಏಕೀಕರಣ 1956 ನವಂಬರ್‌ 1 ರಂದೇ ಆಗಿದ್ದರೂ, 1973 ರಲ್ಲಿ ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು, ನವೆಂಬರ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ನವೆಂಬರ್‌ 1 ರಂದು ಅನಾವರಣಗೊಳಿಸಲಾಗುವುದು ತಿಳಿಸಿದರು.