ನಕಲಿ ಔಷಧಿ ಜಾಲದ ಕಿಂಗ್‌ಪಿನ್ ಪ್ರಶಾಂತ್ ಬಂಧಿಸಿದ ದೆಹಲಿ ಪೊಲೀಸರು; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

ನಕಲಿ ಔಷಧಿ ಜಾಲದ ಕಿಂಗ್‌ಪಿನ್ ಪ್ರಶಾಂತ್ ಬಾಬುನನ್ನು ದೆಹಲಿ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದಾರೆ. 2 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂದೆಡೆ, ಉಚಿತವಾಗಿ ಸಿಗಬೇಕಿದ್ದ ಕ್ಯಾನ್ಸರ್ ಇಂಜೆಕ್ಷನ್‌ಗಳನ್ನೂ ರೋಗಿಗಳಿಗೆ ಹಣಕ್ಕೆ ಮಾರಾಟ ಮಾಡಿರುವ ಆರೋಪ ಬೆಳಕಿಗೆ ಬಂದಿದೆ. ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ 15 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಔಷಧ ಪೂರೈಕೆಯಾಗಿರುವ ಶಂಕೆಯಿದೆ.

ನಕಲಿ ಔಷಧಿ ಜಾಲದ ಕಿಂಗ್‌ಪಿನ್ ಪ್ರಶಾಂತ್ ಬಂಧಿಸಿದ ದೆಹಲಿ ಪೊಲೀಸರು; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!
ಕಿಂಗ್​ಪಿನ್ ಪ್ರಶಾಂತ್
Edited By:

Updated on: Nov 23, 2026 | 11:08 AM

ಮುಖ್ಯಾಂಶಗಳು

  • ನಕಲಿ ಔಷಧಿ ಜಾಲದ ಕಿಂಗ್‌ಪಿನ್ ಪ್ರಶಾಂತ್ ಬಾಬುನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
  • ಉಚಿತ ಕ್ಯಾನ್ಸರ್ ಇಂಜೆಕ್ಷನ್‌ಗಳನ್ನೂ ರೋಗಿಗಳಿಗೆ ಹಣಕ್ಕೆ ಮಾರಾಟ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
  • ಆರು ರಾಜ್ಯಗಳಲ್ಲಿ 15 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಔಷಧ ಪೂರೈಕೆ ಮಾಡಿರುವ ಆರೋಪವಿದೆ.

ಬೆಂಗಳೂರು, ನವೆಂಬರ್ 23: ನಕಲಿ ಔಷಧಿ ದಂಧೆ ನಡೆಸುತ್ತಿದ್ದ ಜಾಲದ ಕಿಂಗ್‌ಪಿನ್ ಪ್ರಶಾಂತ್ ಬಾಬುನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಕರ್ನಾಟಕದ ವಿಶೇಷ ತನಿಖಾ ತಂಡ (ಎಸ್​ಐಟಿ) ಪ್ರಶಾಂತ್‌ನನ್ನು ಬಂಧಿಸಿತ್ತು. ಇದೀಗ ದೆಹಲಿಯ ಮೋತಿಬಾಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಾಡಿ ವಾರಂಟ್ ಮೂಲಕ ಆತನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ತನಿಖೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಸಿಗಬೇಕಿದ್ದ ಇಂಜೆಕ್ಷನ್‌ಗಳನ್ನೂ ಹಣಕ್ಕೆ ಮಾರಾಟ ಮಾಡಿರುವ ಅಂಶ ಬೆಳಕಿಗೆ ಬಂದಿದೆ.

ಉಚಿತ ಕ್ಯಾನ್ಸರ್ ಇಂಜೆಕ್ಷನ್‌ಗಳನ್ನೂ ದುಬಾರಿ ಬೆಲೆಗೆ ಮಾರಾಟ!

ತನಿಖೆಯ ವೇಳೆ ನಕಲಿ ಔಷಧಿ ಜಾಲದ ವಂಚನೆಯ ವಿಧಾನ ಬಯಲಾಗಿದೆ. ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಎರಡು ಕ್ಯಾನ್ಸರ್ ಇಂಜೆಕ್ಷನ್‌ಗಳನ್ನು ಖರೀದಿಸಿದರೆ ಕಂಪನಿಯು ಒಂದು ಇಂಜೆಕ್ಷನ್ ಉಚಿತವಾಗಿ ನೀಡುತ್ತಿತ್ತು. ಆದರೆ ಈ ಮಾಹಿತಿಯನ್ನು ರೋಗಿಗಳಿಗೆ ತಿಳಿಸದೆ ಕಿಂಗ್‌ಪಿನ್ ಪ್ರಶಾಂತ್ ಬಾಬು ಉಚಿತವಾಗಿ ಸಿಗುತ್ತಿದ್ದ ಇಂಜೆಕ್ಷನ್‌ಗಳನ್ನೂ ಹಣ ಪಡೆದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

Loading...

ಅಲ್ಲದೆ, ಇಂಜೆಕ್ಷನ್ ಬಳಕೆ ಮಾಡಿದ ಬಳಿಕ ರೋಗಿ ಮೃತಪಟ್ಟರೆ ಉಳಿದ ಇಂಜೆಕ್ಷನ್‌ಗಳನ್ನು ವಾಪಸ್ ಪಡೆದು, ಬೇರೆಯವರಿಗೆ ಮೂಲ ಬೆಲೆಗೆ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದ ಆರೋಪವೂ ಕೇಳಿಬಂದಿದೆ. ಈ ಮೂಲಕ ಕ್ಯಾನ್ಸರ್ ರೋಗಿಗಳ ಸಂಕಷ್ಟವನ್ನೇ ದಂಧೆಗೆ ಬಳಸಿಕೊಂಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ದಕ್ಷಿಣ ಭಾರತದ ಆರು ರಾಜ್ಯಗಳಲ್ಲಿ ಜಾಲ ವಿಸ್ತರಣೆ!

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಒಟ್ಟು ಆರು ರಾಜ್ಯಗಳಲ್ಲಿ ಈ ಔಷಧಿ ಜಾಲ ಕಾರ್ಯನಿರ್ವಹಿಸುತ್ತಿತ್ತು ಎನ್ನಲಾಗಿದೆ. ಹತ್ತಾರು ಖಾಸಗಿ ಆಸ್ಪತ್ರೆಗಳು ಹಾಗೂ ನೂರಾರು ಔಷಧ ಮಳಿಗೆಗಳ ಮೂಲಕ 15 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಔಷಧ ಪೂರೈಕೆಯಾಗಿರುವ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಜಾಲದ ಮೂಲಕ ಎಷ್ಟು ಇಂಜೆಕ್ಷನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ SIT ತನಿಖೆ ನಡೆಸುತ್ತಿದೆ.

2 ಕೋಟಿ ರೂ. ವಂಚನೆ ಪ್ರಕರಣದಲ್ಲಿ ದೆಹಲಿ ಪೊಲೀಸರ ವಿಚಾರಣೆ

ಇನ್ನೊಂದೆಡೆ, ಔಷಧಿ ನೀಡುವುದಾಗಿ ನಂಬಿಸಿ 2 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ದೆಹಲಿಯ ಮೋತಿಬಾಗ್ ಠಾಣೆಯಲ್ಲಿ ಪ್ರಶಾಂತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರು, ಇದೀಗ ದೆಹಲಿ ನ್ಯಾಯಾಲಯದ ಅನುಮತಿ ಪಡೆದು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದಾರೆ. ಸದ್ಯ 2 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ನಕಲಿ ಔಷಧಿ ದಂಧೆಯ ಸಂಪೂರ್ಣ ಜಾಲದ ಬಗ್ಗೆ ತನಿಖಾ ತಂಡಗಳು ಮಾಹಿತಿ ಕಲೆಹಾಕುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
Loading...
Unable to load recommendations.
Follow Us