ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ರೈತರ ಮುತ್ತಿಗೆ; ಕೇಂದ್ರದ ಕೃಷಿ ನೀತಿ ವಿರುದ್ಧ ಪ್ರತಿಭಟನೆ
ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಸಲುವಾಗಿ ಈ ಪ್ರತಿಭಟನೆಯನ್ನು ಏರ್ಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ರಾಜ್ಯ ಸರ್ಕಾರ ತಕ್ಷಣ ವಾಪಾಸ್ ಪಡೆಯಬೇಕೆಂದು ಆಗ್ರಹಿಸಲಾಗುತ್ತಿದೆ.
ಬೆಂಗಳೂರು: ಕೇಂದ್ರದ ಕೃಷಿ ನೀತಿ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಪ್ರತಿಭಟಿಸಿದ್ದ ರೈತರು ಇನ್ನೂ ತಮ್ಮ ಪಟ್ಟು ಸಡಿಲಿಸಿಲ್ಲ. ಈ ಪ್ರತಿಭಟನೆಯ ಮುಂದುವರೆದ ಭಾಗವೆಂಬಂತೆ ಇಂದು ಬೆಂಗಳೂರಿನಲ್ಲಿ ಕರ್ನಾಟಕದ ರೈತರು ಮತ್ತೆ ಬೀದಿಗಿಳಿಯಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಇಂದು ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾದ ರೈತರು, ಬೃಹತ್ ಪ್ರತಿಭಟನೆ ನಡೆಸಿ ವಿಧಾನಸೌಧವನ್ನು ತಲುಪಲು ಸಿದ್ಧವಾಗಿದ್ದಾರೆ.
ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ನೀತಿಯನ್ನು ವಿರೋಧಿಸಿ ರೈತರೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಸಲುವಾಗಿ ಈ ಪ್ರತಿಭಟನೆಯನ್ನು ಏರ್ಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ರಾಜ್ಯ ಸರ್ಕಾರವು ಇಂದಿನಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಕೃಷಿ ಕಾಯ್ದೆ ವಾಪಸ್ ಪಡೆಯಲೇಬೇಕೆಂದು ರೈತರ ಮೂಲಕ ಒತ್ತಡ ಹೇರುವ ಉದ್ದೇಶವಿದೆ ಎನ್ನಲಾಗಿದೆ.
ಇಂದಿನಿಂದ ಸೆಪ್ಟೆಂಬರ್ 24 ನೇ ತಾರೀಖಿನವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿಗಳು ಸ್ಥಳಕ್ಕೆ ಬರಬೇಕು, ಬಂದು ಕಾಯ್ದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ. 16 ರಾಜ್ಯದಲ್ಲಿ ಬಿಜೆಪಿ ಹಾಗೂ ಬೆಂಬಲಿತ ಸರ್ಕಾರವಿದೆ. ಆ ಯಾವ ರಾಜ್ಯವೂ ಕೇಂದ್ರದ ಕೃಷಿ ಕಾಯ್ದೆ ಜಾರಿಗೆ ತಂದಿಲ್ಲ. ಆದರೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಅಂದಿನ ಸರ್ಕಾರ ಮಾತ್ರ ಇದನ್ನು ಬೆಂಬಲಿಸಿತ್ತು. ಈಗ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಯ್ದೆಯನ್ನು ವಾಪಾಸ್ ಪಡೆಯಲೇಬೇಕು. ಕೃಷಿ ನೀತಿಯನ್ನು ವಾಪಾಸ್ ಪಡೆಯುತ್ತಿವಿ ಅಂದರೆ ಮಾತ್ರ ಪ್ರತಿಭಟನೆ ವಾಪಾಸ್ ಪಡೆಯುತ್ತೀವಿ ಎಂದು ರೈತರು ಪಟ್ಟು ಹಿಡಿದಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಹೊರಡಲಿರುವ ಪ್ರತಿಭಟನಾ ಮೆರವಣಿಗೆ ವಿಧಾನ ಸೌಧವನ್ನು ತಲುಪುವ ಮಾರ್ಗದಲ್ಲಿ ಪೊಲೀಸರು ಈಗಾಗಲೇ ಸಾಕಷ್ಟು ಬಿಗಿಭದ್ರತೆ ವಹಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್ ತಲುಪಿ ಅಲ್ಲಿಂದ ರಾಯಣ್ಣ ಫ್ಲೈ ಓವರ್ ಮೂಲಕ ಶೇಷಾದ್ರಿ ರೋಡ್ಗೆ ಬಂದು ಕೆ.ಆರ್ ಸರ್ಕಲ್ನಿಂದ ಅಂಬೇಡ್ಕರ್ ವೀದಿ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲಿರುವ ರೈತರನ್ನು ಶೇಷಾದ್ರಿ ರಸ್ತೆಯ ಫ್ರೀಡಂ ಪಾರ್ಕ್ ಮುಂಭಾಗದಲ್ಲೇ ತಡೆಯಲು ಪೋಲಿಸರು ಸಿದ್ಧವಾಗಿದ್ದಾರೆ. ಹೀಗಾಗಿ ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ತಡೆಯಲು ನಿರ್ಧರಿಸಲಾಗಿದ್ದು, ಒಂದು ವೇಳೆ ಆ ಬ್ಯಾರಿಕೇಡ್ ಗಳನ್ನು ದಾಟಿ ರೈತರು ಮುತ್ತಿಗೆಗೆ ಮುಂದಾದಲ್ಲಿ ಮಹಾರಾಣಿ ಕಾಲೇಜು ಮುಂಭಾಗದಲ್ಲಿ ಮತ್ತೊಂದು ಸುತ್ತಿನ ಬ್ಯಾರಿಕೇಡ್ ವ್ಯವಸ್ಥೆ ಮಾಡಿಕೊಳ್ಳಲಿದ್ದಾರೆ.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ರೈತರು ಬಂದು ಭಾಗಿಯಾಗಲಿದ್ದಾರೆ ಎನ್ನಲಾಗಿದ್ದು, ಪ್ರಮುಖವಾಗಿ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಹಾಗೂ ರಾಮನಗರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುವ ಸಾಧ್ಯತೆ ಇದೆ. ಅಧಿವೇಶನದ ವೇಳೆ ಪ್ರತಿಭಟನೆ, ಮೆರವಣಿಗೆ ಸಾಧ್ಯತೆ ದಟ್ಟವಾಗಿರುವುದರಿಂದ ವಿಧಾನಸೌಧದ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳು ಸಂಪೂರ್ಣ ರೈತಪರ: ಸುಪ್ರೀಂಕೋರ್ಟ್ ನೇಮಿಸಿದ ಸಮಿತಿ ಸದಸ್ಯ
(Farmers protest against new farm laws in Bengaluru under Kodihalli Chandrashekar leadership)