ಕೊನೆಗೂ ಸಿಕ್ಕಿಬಿದ್ದ ವೋಟರ್ ಐಡಿ ಹಗರಣದ ಕಿಂಗ್‌ಪಿನ್, ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್
ವೋಟರ್ ಐಡಿ ಹಗರಣದ ಕಿಂಗ್‌ಪಿನ್, ಚಿಲುಮೆ ಸಂಸ್ಥೆಯ ಮುಖ್ಯಸ್ಥನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ವೋಟರ್ ಐಡಿ ಹಗರಣ ಪ್ರಕರಣಕ್ಕೆ (Bengaluru voter data theft Case) ಸಂಬಂಧಿಸಿದಂತೆ ಪ್ರಮುಖ ಆರೋಪಿ, ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿ ಕುಮಾರ್ ಅವರನ್ನ ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು(ನವೆಂಬರ್ 20) ಲಾಲ್ಬಾಗ್ ಬಳಿ ಹಲಸೂರು ಗೇಟ್ ಪೊಲೀಸರು ವೋಟರ್ ಐಡಿ ಹಗರಣದ ಕಿಂಗ್‌ಪಿನ್ ರವಿಕುಮಾರ್ನನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದ್ದು ಎಂದು ದೂರು ದಾಖಲಾಗುತ್ತಿದ್ದಂತೆಯೇ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕಿಂಗ್‌ಪಿನ್ ರವಿಕುಮಾರ್ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ರವಿಕುಮಾರ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನು ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಪ್ರತಿಕ್ರಿಯಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ ಬಂಧನವನ್ನು ಖಚಿತಪಡಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ ನನ್ನ ಬಂಧಿಸಲಾಗಿದೆ. ಈ ಮೂಲಕ ಒಟ್ಟು ಐವರ ಬಂಧನವಾಗಿದೆ. ಆರೋಪಿ ರವಿಕುಮಾರ್ ತುಮಕೂರು, ಉತ್ತರ ಕನ್ನಡ, ಶಿರಸಿ ಭಾಗದಲ್ಲಿ ಓಡಾಡಿದ್ದ. ಅಂತಿಮವಾಗಿ ಬೆಂಗಳೂರಿನಲ್ಲೇ ಆರೋಪಿಯನ್ನ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಬಂಧನವಾದವರ ಜೊತೆಗೆ ರವಿಕುಮಾರ್ ವಿಚಾರಣೆ ಮಾಡಲಿದ್ದೇವೆ. ಉಳಿದಂತೆ ಪಿ.ಆರ್.ಓಗಳು, ಸಿಬ್ಬಂದಿ ಸಹಿತ ಸುಮಾರು 15 ಜನರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ದೂರು ನೀಡಿದ್ದ ಬಿಬಿಎಂಪಿ
ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.
ಈ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 12:17 am, Mon, 21 November 22