ಕರ್ನಾಟಕದಲ್ಲೂ ಪ್ರವಾಹ, ಭೂಕುಸಿತ: ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಕರ್ನಾಟಕದಲ್ಲೂ ಪ್ರವಾಹ, ಭೂಕುಸಿತವಾಗುತ್ತಿದ್ದು, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಬೆಂಗಳೂರು, ಜು.30: ಭಾರಿ ಮಳೆ, ಪ್ರವಾಹ ಪರಿಸ್ಥಿತಿ ಹಿನ್ನೆಲೆ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲೆಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸಿಎಂ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ
ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು, ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರ ವಹಿಸುವಂತೆ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ:ಕಾವೇರಿ ನದಿಯಲ್ಲಿ ಮುಳುಗಡೆಯಾಯ್ತು ದೋಣಿ ಕಡವು ಗ್ರಾಮ; ಪ್ರಾಣ ಕೈಯಲ್ಲಿ ಹಿಡಿದು ಪ್ರವಾಹ ದಾಟುತ್ತಿರೋ ಜನರು
ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ತಿಳಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ