GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!

ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ಜೂನ್ 30ರ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜಾತಿಗಣತಿ ಮತ್ತು ಮತದಾರರ ಪಟ್ಟಿಯ ತಿದ್ದುಪಡಿ ಕಾರ್ಯಗಳಲ್ಲಿ ಸಿಬ್ಬಂದಿ ನಿರತರಾಗಿರುವುದು ಹಾಗೂ ಹಣಕಾಸಿನ ಕೊರತೆ ಇದಕ್ಕೆ ಕಾರಣವಾಗಿದ್ದು, ಆಯೋಗವು ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಗೆ ಒತ್ತಾಯಿಸಿದೆ.

GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!
ಜಿಬಿಎ ಚುನಾವಣೆ
Image Credit source: google Gemini

Updated on: Apr 25, 2026 | 12:27 PM

ನವದೆಹಲಿ, ಏಪ್ರಿಲ್ 25: ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಯ ಕುರಿತಾಗಿ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಮನವಿ ಮಾಡಿದೆ.

ಜಾತಿಗಣತಿಯಲ್ಲೇ ನಿರತರಾಗಿರುವ ಸಿಬ್ಬಂದಿ

ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಗಡುವಿನೊಳಗೆ ಚುನಾವಣೆಯನ್ನು ಪೂರ್ಣಗೊಳಿಸಲು ಸಿಬ್ಬಂದಿ ಮತ್ತು ಹಣದ ಕೊರತೆ ಇದೆ ಎಂದು ಆಯೋಗ ತಿಳಿಸಿದೆ. ಇದೇ ವೇಳೆ ಜನಗಣತಿ ಕಾರ್ಯಗಳು ಏಪ್ರಿಲ್ 16ರಿಂದ ಮೇ 15ರವರೆಗೆ ನಡೆಯುತ್ತಿರುವುದರಿಂದ ಕ್ಷೇತ್ರದ ಸಿಬ್ಬಂದಿ ಅದರಲ್ಲಿ ನಿರತರಾಗಿರುತ್ತಾರೆ ಎಂದು ಹೇಳಲಾಗಿದೆ. ಜೊತೆಗೆ, ಮತದಾರರ ಪಟ್ಟಿಯ ವಿಶೇಷ ತಿದ್ದುಪಡಿ (SIR) ಕಾರ್ಯವೂ ನಡೆಯುವ ಸಾಧ್ಯತೆ ಇರುವುದರಿಂದ ಚುನಾವಣಾ ಪ್ರಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಕ್ಷಣ ಹಣ ಬಿಡುಗಡೆ ಮಾಡುವಂತೆ ಬೇಡಿಕೆ

ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಖ್ಯ ಆಯುಕ್ತರು ಏಪ್ರಿಲ್ 6ರಂದು ಪತ್ರ ಬರೆದು ಚುನಾವಣೆಗೆ ಗಡುವು ವಿಸ್ತರಿಸುವಂತೆ ಕೇಳಿಕೊಂಡಿದ್ದರು. ಬಳಿಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯೂ ಇದೇ ಬೇಡಿಕೆಯನ್ನು ಪುನರಾವರ್ತಿಸಿದೆ. ಆಯೋಗವು ಏಪ್ರಿಲ್ 18ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಚುನಾವಣೆಯನ್ನು ಜೂನ್ 30ರೊಳಗೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದೆ.

ಚುನಾವಣೆ ನಡೆಸಲು ಅಗತ್ಯವಾದ ಸಿಬ್ಬಂದಿ, ಮೂಲಸೌಕರ್ಯ ಹಾಗೂ ಫಂಡ್​ಗಾಗಿ ರಾಜ್ಯ ಸರ್ಕಾರದ ಮೇಲೆಯೇ ಸಂಪೂರ್ಣ ಅವಲಂಬಿತವಾಗಿರುವುದಾಗಿ ಆಯೋಗ ಹೇಳಿದ್ದು, ತಕ್ಷಣ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಕೇಳಿಕೊಂಡಿದೆ. ಈ ಕುರಿತು ಸೂಕ್ತ ಆದೇಶ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us