ಕೃಷಿ ಅಧಿಕಾರಿಗಳ ನೇಮಕಾತಿ ಅಕ್ರಮ ಆರೋಪ: GKVK ವಿವಿಗೆ ಬೀಗ ಜಡಿದು ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ!

ಕೃಷಿ ಇಲಾಖೆಯ ಅಧಿಕಾರಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಖಂಡಿಸಿ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ಯ ಪದವೀಧರರಿಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಡೀನ್ ಕಚೇರಿಗೆ ಬೀಗ ಜಡಿಯಲಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.

ಕೃಷಿ ಅಧಿಕಾರಿಗಳ ನೇಮಕಾತಿ ಅಕ್ರಮ ಆರೋಪ: GKVK ವಿವಿಗೆ ಬೀಗ ಜಡಿದು ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ!
ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ
Edited By:

Updated on: Aug 04, 2026 | 7:38 AM

ಮುಖ್ಯಾಂಶಗಳು

  • ಕೃಷಿ ಇಲಾಖೆ ಹುದ್ದೆಗಳ ನೇಮಕಾತಿ ನಿಯಮ ವಿರೋಧಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ.
  • ಜಿಕೆವಿಕೆ ಡೀನ್ ಕಚೇರಿಗೆ ಬೀಗ ಜಡಿದು ಸರ್ಕಾರದ ವಿರುದ್ಧ ಆಕ್ರೋಶ.
  • ಬೇಡಿಕೆ ಈಡೇರದಿದ್ದರೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ, ವಿಧಾನಸೌಧ ಮುತ್ತಿಗೆ ಎಚ್ಚರಿಕೆ.

ಬೆಂಗಳೂರು, ಆಗಸ್ಟ್ 04: ರಾಜ್ಯ ಸರ್ಕಾರದ ಕೃಷಿ ಇಲಾಖೆ ವಿರುದ್ಧ ಕೃಷಿ ಪದವೀಧರರು ತೀವ್ರ ಆಕ್ರೋಶ ಹೊರಹಾಕಿದ್ದು, ಹೋರಾಟದ ಹಾದಿ ಹಿಡಿದಿದ್ದಾರೆ. ನೇಮಕಾತಿ ನಿಯಮಗಳನ್ನು ಗಾಳಿಗೆ ತೂರಿ ಕೃಷಿ ಅಧಿಕಾರಿ (AO) ಹಾಗೂ ಕೃಷಿ ಸಹಾಯಕ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಅನ್ಯ ಪದವೀಧರರಿಗೆ ಅವಕಾಶ: ವಿದ್ಯಾರ್ಥಿಗಳ ಆಕ್ರೋಶ

ಇತ್ತೀಚೆಗಷ್ಟೇ ಸರ್ಕಾರವು 900ಕ್ಕೂ ಹೆಚ್ಚು ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ, ಕೃಷಿ ಸಂಬಂಧಿತ ಪಠ್ಯಕ್ರಮಗಳನ್ನು ಓದಿದ ಪದವೀಧರರ ಬದಲಿಗೆ ಬಿ.ಇ/ಬಿ.ಟೆಕ್‌ನಲ್ಲಿ ಬಯೋ ಕೆಮಿಸ್ಟ್ರಿ ಓದಿದ ಅಭ್ಯರ್ಥಿಗಳಿಗೂ ಈ ಹುದ್ದೆಗಳಿಗೆ ಅವಕಾಶ ಕಲ್ಪಿಸಿರುವುದು ಕೃಷಿ ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. “ವರ್ಷಗಟ್ಟಲೆ ಕೃಷಿ ವಿಷಯಗಳಲ್ಲೇ ಪದವಿ ಪಡೆದ ನಮಗೂ, ತಂತ್ರಜ್ಞಾನ ಪದವಿಯಲ್ಲಿ ಬಯೋ ಕೆಮಿಸ್ಟ್ರಿ ಓದಿದವರಿಗೂ ವ್ಯತ್ಯಾಸವಿಲ್ಲವೇ?” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಡೀನ್ ಕಚೇರಿಗೆ ಬೀಗ ಜಡಿದು ಆಕ್ರೋಶ

ಕಳೆದ 15 ದಿನಗಳಿಂದ ಜಿಕೆವಿಕೆ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಜಿಕೆವಿಕೆ ಡೀನ್ ಕಚೇರಿಗೆ ಬೀಗ ಜಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಶಿಕ್ಷಣದ ಅಸ್ತಿತ್ವಕ್ಕೇ ಧಕ್ಕೆ ತರುತ್ತಿರುವ ಈ ತಾರತಮ್ಯದ ನೇಮಕಾತಿ ನಿಯಮಾವಳಿಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ವಿಧಾನಸೌಧ ಮುತ್ತಿಗೆಗೆ ಎಚ್ಚರಿಕೆ

ಕೃಷಿ ವಿದ್ಯಾರ್ಥಿನಿ ರೇಷ್ಮಾ ಮಾತನಾಡಿ, “ಸರ್ಕಾರ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಸದ್ಯ ಕೃಷಿ ವಿದ್ಯಾರ್ಥಿಗಳ ಈ ಉಗ್ರ ಹೋರಾಟಕ್ಕೆ ಸರ್ಕಾರ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 am, Tue, 4 August 26

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
Loading...
Unable to load recommendations.
Follow Us