ಆನೇಕಲ್: ಮಕ್ಕಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ; ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗಿಲ್ಲ ಪಾಠ ಪ್ರವಚನ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 19, 2023 | 7:51 PM

ವಿಧ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ಆನೇಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ಹಾಸ್ಟೆಲ್​ಗೆ ಬಂದಿದ್ದರು. ಆದ್ರೆ, ಅಲ್ಲಿನ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಶಿಕ್ಷಕರ ಕೊರತೆ, ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೆ ಹೈರಾಣಾಗಿದ್ದಾರೆ. 

ಆನೇಕಲ್: ಮಕ್ಕಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ; ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗಿಲ್ಲ ಪಾಠ ಪ್ರವಚನ
ಆನೇಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
Follow us on

ಬೆಂಗಳೂರು, ಡಿ.19: ಆನೇಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ (Kittur Rani Channamma Residential School) ಯಲ್ಲಿ ಬೋಧಕ ಸಿಬ್ಬಂದಿ ಕೊರತೆ ಮತ್ತು ಮೂಲಭೂತ ಸೌಕರ್ಯಗಳ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಪರೀಕ್ಷೆ ಪ್ರಾರಂಭವಾಗಲಿದೆ. ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯುವುದಕ್ಕೆ ಉತ್ಸಾಹದಿಂದ ಇದ್ದಾರೆ. ಆದರೆ, ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಪಾಠ ಪ್ರವಚನ ಪೂರ್ಣಗೊಂಡಿಲ್ಲ. ಮೂರು ತಿಂಗಳಲ್ಲಿ ಉಳಿದ ಪಾಠಗಳ ಬೋಧನೆ ಮಾಡಿದರೂ ಕಲಿಯಲು ಸಾಧ್ಯವಿಲ್ಲ. ಹಾಗಾಗಿ ಕೂಡಲೇ ಕಾಯಂ ಬೋಧಕ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಇನ್ನು ಈ ಶಾಲೆಯಲ್ಲಿ ಶಿಕ್ಷಕರ ಕೊರತೆ ಜೊತೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸುತ್ತಿಲ್ಲ. ಶುದ್ಧ ಕುಡಿಯುವ ಕುಡಿಯುವ ನೀರಿನ‌ ವ್ಯವಸ್ಥೆ ಇಲ್ಲ, ಗುಣಮಟ್ಟದ ಆಹಾರ ನೀಡುತ್ತಿಲ್ಲ. ಸ್ನಾನ ಸೇರಿದಂತೆ ಇತ್ಯಾದಿ ಬಳಕೆಗೆ ನೀರು ಸಹ ಸಮರ್ಪಕವಾಗಿ ಪೂರೈಸುವುದಿಲ್ಲ. ಸ್ವಚ್ಚತೆ ಇಲ್ಲದೆ ಬಹುತೇಕ ವಿದ್ಯಾರ್ಥಿಗಳಿಗೆ ಚರ್ಮದ ಕಾಯಿಲೆ ಕಾಣಿಸಿಕೊಂಡಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ವಸತಿ ಶಾಲೆ ಬಳಿ ಜಮಾಯಿಸಿದ್ದು, ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಬಳ್ಳಾರಿ: 27 ಕೋಟಿ ವೆಚ್ಚದ ಕಟ್ಟಡ ಇದ್ದರೂ ಎಪಿಎಂಸಿ ಗೋದಾಮಿನಲ್ಲಿ ವಸತಿ ಶಾಲೆ!

ಈ ಕುರಿತು ಮಾತನಾಡಿದ ವಸತಿ ಶಾಲೆ ಪ್ರಾಂಶುಪಾಲರಾದ ರಾಧ ಅವರು ‘ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲರು ಮಾತ್ರ ಹೇಳಿಕೊಳ್ಳುವಂತಹ ಯಾವುದೇ ಸಮಸ್ಯೆ ಇಲ್ಲ. ನಮ್ಮ ಗಮನಕ್ಕೆ ಬಂದ ತಕ್ಷಣ ಬಗೆಹರಿಸಲಾಗಿದೆ. ಶಿಕ್ಷಕರ ಕೊರತೆ ಇದ್ದು, ಅತಿಥಿ ಶಿಕ್ಷಕರಿಂದ ಪಾಠ ಪ್ರವಚನ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಒಟ್ಟಿನಲ್ಲಿ ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯಗಳ ಅವ್ಯವಸ್ಥೆ ಬಗ್ಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಪ್ರಾಂಶುಪಾಲರಿಗೆ ತಿಳಿಸಿದರೂ ಯಾವುದೇ ಕ್ರಮವಹಿಸಿಲ್ಲ. ಹಾಗಾಗಿ ಇನ್ನಾದರೂ ವಿದ್ಯಾರ್ಥಿಗಳು ಮತ್ತವರ ಪೋಷಕರ ಆಗ್ರಹಕ್ಕೆ ಮನ್ನಣೆ ದೊರೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ