ಫೆ 9ರಿಂದ 3 ದಿನ ಶಾಲೆ-ಕಾಲೇಜುಗಳಿಗೆ ರಜೆ; ಕರ್ನಾಟಕ ಸರ್ಕಾರದಿಂದ ಘೋಷಣೆ
ಹಿಜಾಬ್ ಪರವಾಗಿ ಕೋರ್ಟ್ ತೀರ್ಪು ನೀಡಿದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಹಿಜಾಬ್ ಪರವಾಗಿ ಕೋರ್ಟ್ ತೀರ್ಪು ನೀಡಿದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ (Karnataka Government) ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ, ರಾಜ್ಯದ ಕಾಲೇಜುಗಳಲ್ಲಿ ಸಮವಸ್ತ್ರ ವಿವಾದ ಹಿನ್ನೆಲೆಯಲ್ಲಿ ಬುಧವಾರದಿಂದ (ಫೆ 9) ಮೂರು ದಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
ಮುಂದುವರಿದು ಮಾತನಾಡಿದ ಸಚಿವ ಅಶ್ವತ್ಥ್ ನಾರಾಯಣ, ಹಿಜಾಬ್ ವಿಚಾರದಲ್ಲಿ ಸರ್ಕಾರ ಈಗಾಗಲೇ ತನ್ನ ನಿರ್ಧಾರ ಹೇಳಿದೆ. ಆದರೂ ಕೆಲ ಕಡೆ ಸ್ಥಿತಿ ಗಂಭೀರವಾಗಿದೆ. ಇದರ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಎಲ್ಲಾ ಹೈಸ್ಕೂಲ್, ಪಿಯು ಕಾಲೇಜು, ಡಿಗ್ರಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್: 3 ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಣೆ ಕುರಿತು ಟ್ವೀಟ್ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.
1 ರಿಂದ 7ನೇ ತರಗತಿವರೆಗೆ ಶಾಲೆ ಎಂದಿನಂತೆ ತರಗತಿ: ನಾಳೆಯಿಂದ 3 ದಿನ ಪ್ರೌಢಶಾಲೆ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಆದರೆ 1 ರಿಂದ 7ನೇ ತರಗತಿವರೆಗೆ ಶಾಲೆ ಎಂದಿನಂತೆ ತರಗತಿ ನಡೆಯಲಿವೆ.
ನಾಳೆ ಸಚಿವ ಸಂಪುಟ ಸಭೆ: ನಾಳೆ ಮಧ್ಯಾಹ್ನ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದ್ದು, ವಿವಿಧ ಜಿಲ್ಲೆಗಳ ಪರಿಸ್ಥಿತಿ ಕುರಿತು ಸಚಿವರೊಂದಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಈಗಾಗಲೇ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಉಸ್ತುವಾರಿ ಸಚಿವರಿಂದ ಸಿಎಂ ಮಾಹಿತಿ ಸಂಗ್ರಹಿಸಿದ್ದಾರೆ.
ನಾಳೆ ಮಹತ್ವದ ಚರ್ಚೆ: ನಾಳೆ ಸಂಪುಟ ಸಭೆಯಲ್ಲಿ ಹಿಜಾಬ್ ಬಗ್ಗೆ ಮಹತ್ವದ ಚರ್ಚೆ ನಡೆಸುತ್ತೇವೆ ಅಂತ ಬೆಂಗಳೂರಿನಲ್ಲಿ ಪ್ರಾಥಮಿಕ ಸಚಿವ ಬಿಸಿ ನಾಗೇಶ್ ಹೇಳಿಕೆ ನೀಡಿದ್ದಾರೆ. ಈಗಷ್ಟೇ ಸಿಎಂ ಬೊಮ್ಮಾಯಿ ನನ್ನ ಜತೆ ಚರ್ಚೆ ನಡೆಸಿದ್ದಾರೆ. ಹೈಕೋರ್ಟ್ ಆದೇಶ ನೀಡಿದ್ರೆ ಪ್ರತ್ಯೇಕ ಸಭೆ ನಡೆಸಿ ಚರ್ಚೆ ಮಾಡಲಾಗುವುದು. ಕಿಡಿಗೇಡಿಗಳು ಇದನ್ನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಹಿಜಾಬ್ ವಿವಾದ ಬಗ್ಗೆ ವಿಸ್ತೃತವಾಗಿ ಚರ್ಚೆ ಆಗುತ್ತೆ ಅಂತ ತಿಳಿಸಿದರು.
ಇದನ್ನೂ ಓದಿ
Bhishma Ashtami 2022: ಭೀಷ್ಮ ಅಷ್ಟಮಿಯಂದು ತರ್ಪಣ ನೀಡಿದರೆ ಈ ಪ್ರಯೋಜನ ಪ್ರಾಪ್ತಿಯಾಗುತ್ತದೆ
Published On - 4:34 pm, Tue, 8 February 22