
ಬೆಂಗಳೂರು, ಅಕ್ಟೋಬರ್ 14: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿ ರಚನೆಯಾಗಿರುವ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಚುನಾವಣಾ ಆಯೋಗ (election commission) ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಸದ್ಯದಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ದಿನಾಂಕ ಕೂಡ ಘೋಷಣೆ ಆಗುವ ಸಾಧ್ಯತೆ ಇದೆ.
ಸುಮಾರು ವರ್ಷಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಯೇ ನಡೆದಿಲ್ಲ. ಪದೆಪದೇ ಮುಂದೂಡಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚನೆ ಮಾಡಿತು. ಆ ಮೂಲಕ 5 ನಗರ ಪಾಲಿಕೆಗಳನ್ನು ರಚನೆ ಮಾಡಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಅಧಿಕಾರಿಗಳ ನೇಮಕ ಮಾಡಿದೆ.
ಇದನ್ನೂ ಓದಿ: ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ: ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್ನಲ್ಲಿ ಚುನಾವಣೆ
ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ನಗರ ಪಾಲಿಕೆಯ ಎಲ್ಲಾ ವಾರ್ಡ್ಗಳಿಗೆ ಜಿಬಿಎ ಆಯುಕ್ತ ಎಂ.ಮಹೇಶ್ವರ ರಾವ್ ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ.
ಇನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ಚುನಾವಣಾ ಸಂಬಂಧಿತ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ರಮೇಶ್ ಜಿ.ಎಸ್, ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಳ ಸುನಿಲ್ ಕುಮಾರ್, ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ: ರಮೇಶ್ ಕೆ.ಎನ್ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ ಅವರನ್ನು ಅವರವರ ಪಾಲಿಕೆಯ ಎಲ್ಲಾ ವಾರ್ಡ್ಗಳಿಗೆ ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳೆಂದು ನೇಮಿಸಿ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ.
ಇದನ್ನೂ ಓದಿ: ಗ್ರೇಟರ್ ಬೆಂಗಳೂರು: ಐದು ಪಾಲಿಕೆಗೆ ಆಯುಕ್ತರ ನೇಮಕ, ಆಡಳಿತ ಹೇಗಿರಲಿದೆ? ಮೇಯರ್ ಅಧಿಕಾರವಧಿ ಎಷ್ಟು?
2011ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು, ಈ ಹಿಂದೆ 198 ವಾರ್ಡ್‌ಗಳನ್ನು ಹೊಂದಿದ್ದ ಬೆಂಗಳೂರನ್ನು ಈಗ ಒಟ್ಟು 368 ವಾರ್ಡ್‌ಗಳಾಗಿ ಪುನರ್ ವಿಂಗಡಿಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.