ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಬೆಂಗಳೂರಿನಲ್ಲಿರುವ ಚಿಲುಮೆ ಕಚೇರಿ ಮೇಲೆ ಪೊಲೀಸ್ ದಾಳಿ
ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಚೇರಿ ಮೇಲೆ ಪೋಲೀಸ್ ದಾಳಿ ಮಾಡಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೇಲೆ ಪೊಲೀರು ದಾಳಿ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಚಿಲುವೆ ಕಚೇರಿ ಮೇಲೆ ಇಂದು(ನ.18) ಹಲಸೂರು ಗೇಟ್ ಪೊಲೀಸರು ದಾಳಿ ಮಾಡಿದ್ದು, ಕಚೇರಿಯನ್ನು ಪರಿಶೀಲನೆ ನಡೆಸಿದ್ದಾರೆ.
ವೋಟರ್ ಐಡಿ ಅಕ್ರಮ: ಬಿಬಿಎಂಪಿ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲು, ನಾಲ್ವರು ಪೊಲೀಸ್ ವಶಕ್ಕೆ, ಆರ್ಒ ಸಸ್ಪೆಂಡ್
ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಸಂಸ್ಥೆ ವಿರುದ್ಧ ಹಲಸೂರುಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಈ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಠಾಣೆ ಇನ್ಸ್‌ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.ಈ ಮಧ್ಯೆ ಪಿಎಸ್ ಐ ಕುಮಾರ್, ಹೆಡ್ ಕಾನ್ ಸ್ಟೇಬಲ್ ರಾಮಕೃಷ್ಣ ಹಾಗು ಏಳು ಜನರ ತಂಡ ಮಲ್ಲೇಶ್ವರಂನಲ್ಲಿ ಇರೋ ಚಿಲುಮೆ ಕಚೇರಿ ಮೇಲೆ ದಾಳಿ ಮಾಡಿದೆ.
ಸಿಸಿಬಿ ಟೆಕ್ನಿಕಲ್ ತಂಡ ಭೇಟಿ ಚಿಲುಮೆ ಸಂಸ್ಥೆಯ ಕಚೇರಿಗೆ ಸಿಸಿಬಿ ಟೆಕ್ನಿಕಲ್ ತಂಡ ಕೂಡ ಆಗಮಿಸಿದ್ದು, ಚಿಲುಮೆ ಕಚೇರಿಯ ಕಂಪ್ಯೂಟರ್‌ನಲ್ಲಿರುವ ಡೇಟಾ ಪರಿಶೀಲನೆ ಮಾಡುತ್ತಿದೆ. ಸಿಸಿಬಿ ಇನ್ಸ್‌ಪೆಕ್ಟರ್ ಪ್ರಶಾಂತ್ ಬಾಬು ನೇತೃತ್ವದ ತಂಡ ಡಿಲೀಟ್ ಆಗಿರುವ ಡೇಟಾ ರಿಟ್ರೀವ್ ಮಾಡುತ್ತಿದೆ.
ದೂರು ನೀದಿದ್ದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ
ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಚಿಲುಮೆ ಶೈಕ್ಷಣಿಕ, ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬಿಬಿಎಂಪಿ ವ್ಯಾಪ್ತಿಯ ಬಿಎಲ್‌ಓಗಳೊಂದಿಗೆ ಸಮನ್ವಯ ಸಾಧಿಸಿ ಹಲವು ಷರತ್ತುಗಳನ್ನು ಪಾಲಿಕೆ ವಿಧಿಸಿತ್ತು. ಮತದಾರರ ಪಟ್ಟಿಪರಿಷ್ಕರಣೆಯ ಜಾಗೃತಿ ಹಾಗೂ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಬಿಎಲ್‌ಓ ಹಾಗೂ ಮತದಾರರ ನೋಂದಣಾಧಿಕಾರಿಗಳ ಸಹಯೋಗದೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲಾಗಿತ್ತು.
ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿತ್ತು. ಆದರೂ ಸಂಸ್ಥೆ ಮತ್ತು ಸಂಸ್ಥೆಗೆ ಸೇರಿದ್ದ ಕೆ.ಎಂ.ಲೋಕೇಶ್ ಎಂಬುವವರು ಬಿಬಿಎಂಪಿಯಿಂದ ಯಾವುದೇ ಅನುಮತಿ ಪಡೆಯದೇ ಮತಗಟ್ಟೆಮಟ್ಟದ ಸಮನ್ವಯ ಅಧಿಕಾರಿ ಎಂಬ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡಿದ್ದರು. ಅಲ್ಲದೇ ನಾವು ಮತಗಟ್ಟೆಮಟ್ಟದ ಅಧಿಕಾರಿಗಳು ಎಂದು ಹೇಳಿಕೊಂಡು ನಕಲಿ ಮತಗಟ್ಟೆಮಟ್ಟದ ಅಧಿಕಾರಿಗಳ(ಬಿಎಲ್‌ಓ) ಗುರುತಿನ ಚೀಟಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ವ್ಯಕ್ತಿಯು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸದೇ ನೇರವಾಗಿ ಮನೆ, ಮನೆಗೆ ಹೋಗಿ ಸಾರ್ವಜನಿಕರಿಂದ ಮತದಾರರ ಗುರುತಿನ ಚೀಟಿ ಹಾಗೂ ಆಧಾರ್ ಚೀಟಿಯನ್ನು ಸಂಗ್ರಹಿಸಿ ಅದನ್ನು ವೈಯಕ್ತಿಕವಾಗಿ ಯಾವುದೋ ಆ್ಯಪ್ ಸಿದ್ಧಪಡಿಸಿಕೊಂಡು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಿ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ದೂರಿನಲ್ಲಿ ವಿವರಿಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 5:00 pm, Fri, 18 November 22