AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಪಕ್ಷಗಳ ಮೇಕೆದಾಟು ಮಕ್ಮಲ್ ಟೋಪಿ; ಕಾಂಗ್ರೆಸ್, ಬಿಜೆಪಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ

HD Kumaraswamy: ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ಚುನಾವಣಾ ಆಟ ಶುರು ಮಾಡಿವೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಷ್ಟ್ರೀಯ ಪಕ್ಷಗಳ ಮೇಕೆದಾಟು ಮಕ್ಮಲ್ ಟೋಪಿ; ಕಾಂಗ್ರೆಸ್, ಬಿಜೆಪಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on: Mar 06, 2022 | 8:24 AM

Share

ಬೆಂಗಳೂರು: ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ಬಿಕ್ಕಟ್ಟಿನ ಲೇಪನ ಹಚ್ಚಿದ್ದಾರೆ. ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮೇಕೆದಾಟು ವಿವಾದದ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ಚುನಾವಣಾ ಆಟ ಶುರು ಮಾಡಿವೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ. ಈಗ ಕೇಂದ್ರ ಸಚಿವರಾದ ಶೇಖಾವತ್‌ ಅವರು; “ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ” ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರಕಾರದ ಪಾತ್ರವೇ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ನೀವೇ ಬಗೆಹರಿಸಿಕೊಳ್ಳಿ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ಹೊಸ ವರಸೆ ಶುರು ಮಾಡಿತೇ ಎನ್ನುವ ಸಂಶಯ ನನ್ನದು ಎಂದು ಹೇಳಿದ್ದಾರೆ.

ಈ ಬಗ್ಗೆ; 1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ಹಿಗ್ಗಿ ಹೀರೆಕಾಯಿ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರಕಾರದ ಜತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಾರಾ? ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ವಿಚಾರವೂ ಮಾತುಕತೆ ಮೂಲಕ ಬಗೆಹರಿಯಲಿ: ಕೇಂದ್ರ ಜಲ‌ ಶಕ್ತಿ ಸಚಿವ ಶೇಖಾವತ್ ಆಶಯ, ಅಭಿಪ್ರಾಯ!

ಇದನ್ನೂ ಓದಿ: Karnataka Budget 2022; ಬಜೆಟ್​ನಲ್ಲಿ ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ