ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡಿಗೆ ಸದ್ಯಕ್ಕೆ ರಿಲೀಫ್ ಸಿಗಲಿದೆ. 3 ದಿನ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಕೊನೆಯ 3 ದಿನ ಯಲ್ಲೋ ಅಲರ್ಟ್ ಇದ್ದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಿಗೂ 5 ದಿನ ಯಲ್ಲೋ ಅಲರ್ಟ್ ಇರಲಿದೆ. ಹಾಗೂ ಬೆಂಗಳೂರಿಗೆ ಇಂದಿನಿಂದ 3 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಮಳೆಯಾಗಲಿದೆ. ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ.
ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 4 ದಿನ ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Published On - 3:19 pm, Sun, 4 September 22