ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಇಂದು ಸೇರಿ ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, (Udupi) ಉತ್ತರ ಕನ್ನಡ (Uttar Kannada), ದಕ್ಷಿಣ ಕನ್ನಡ (Dakshin Kannada) ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಉತ್ತರ ಕರ್ನಾಟಕ ಭಾಗದ 5 ಜಿಲ್ಲೆಗಳು, ಮಲೆನಾಡಿನ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
ಅರಬ್ಬೀ ಸಮುದ್ರ, ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮನ ಇಲಾಖೆ ತಿಳಿಸಿದೆ.
ಕಾಫಿನಾಡಲ್ಲಿ ಮುಂದುವರೆದ ವರುಣನ ಅಬ್ಬರ, ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಕೆಲವೊಂದು ನಿರ್ಬಂಧ ಹೇರಿದೆ. ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ಸ್ಥಳಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಫಾಲ್ಸ್ , ಮಾಣಿಕ್ಯಧಾರ ಸ್ಥಳಕ್ಕೆ ಹೋಗುವ ಪ್ರವಾಸಿಗರಿಗೆ ಕೆಲವೊಂದು ನಿರ್ಭಂದ ಹೇರಿದೆ.
1200 ಕೆಜಿ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿಷೇಧ, ಬೆಳಗ್ಗೆ 6 ರಿಂದ 9 ಹಾಗೂ ಸಂಜೆ 2 ರಿಂದ 4 ಗಂಟೆವರೆಗೆ ಮಾತ್ರ ಪ್ರವೇಶ, ತಲಾ 150 ವಾಹನಗಳಂತೆ ದಿನಕ್ಕೆ 300 ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಧಿಕೃತ ಹೊಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಗಿರಿಸಾಲಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕೆಲ ನಿರ್ಬಂಧ ಹೇರಲಾಗಿದೆ. ಆದರೆ ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ.