ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆಯಿಂದ ಎರಡು ದಿನ ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ
ಬಂಗಾಳಕೊಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ 4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆ (Heavy Rain) ಆಗುತ್ತಿದೆ. ನಾಳೆಯಿಂದ ಎರಡು ದಿನಗಳು ಜಿಲ್ಲಾ ಪ್ರವಾಸ ಮಾಡುತ್ತೇನೆ ಎಂದು ನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ನಾಳೆ ಕೊಡಗು, ದ.ಕನ್ನಡ, ಉಡುಪಿ, ಕಾರವಾರ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದು, ಕೊಡಗಿನಲ್ಲಿ ಮಳೆ ಹಾನಿ, ಭೂಕುಸಿತ ಸ್ಥಳ ಪರಿಶೀಲಿಸುತ್ತೇನೆ. ಜೊತೆಗೆ ಮಳೆ ಸಂಬಂಧ ಅಧಿಕಾರಿಗಳ ಜತೆ ಸಭೆ ಮಾಡುತ್ತೇನೆ. ಸಂತ್ರಸ್ತರ ಜೊತೆಗೆ ಮಾತಾಡಿ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಾಗುವುದು. ಮಂಗಳೂರಿನಲ್ಲಿ ವಾಸ್ತವ್ಯ ಹೂಡಿ ನಾಡಿದ್ದು ಮಂಗಳೂರು, ಉಡುಪಿ, ಕಾರವಾರ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: Karnataka Rain: ಜುಲೈ 14ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ, ಶಾಲೆಗಳಿಗೆ ರಜೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ:
ಬಂಗಾಳಕೊಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ 4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿ ಭಾಗಕ್ಕೆ ರೆಡ್ ಅಲರ್ಟ್ ಮುಂದುವರೆದಿದ್ದು, ಧಾರವಾಡ, ಹಾವೇರಿ, ಕಲಬುರಗಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜಾಧಾನಿಯಲ್ಲಿ ಇನ್ನು ನಾಲ್ಕು ದಿನ ಮಳೆ ಮುಂದುವರಿಯಲಿದ್ದು, ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಕೂಡ ಇದೆ.
ಇದನ್ನೂ ಓದಿ; ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ: ಸ್ಥಗಿತಗೊಂಡ ಕಿಕ್ರೆ-ಶೃಂಗೇರಿ ಸಂಪರ್ಕ
ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಶಾಲಾ- ಕಾಲೇಜುಗಳಿಗೆ ರಜೆ:
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಜುಲೈ 13ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಭಾಗದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಜೂನ್ ಆರಂಭದಿಂದ ಇದುವರೆಗೂ ಮಳೆಯಿಂದ 12 ಜನರು ಮೃತಪಟ್ಟಿದ್ದಾರೆ. ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರಿನಲ್ಲಿ 44 ಮನೆಗಳು ನೆಲಸಮವಾಗಿದೆ. ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆ ಘಾಟ್ನಲ್ಲಿ ಕೂಡ ಗುಡ್ಡ ಕುಸಿತವಾಗಿದೆ. ಕೊಡಗಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತವಾಗಿದ್ದು, 50 ಮನೆಗಳಿಗೆ ಹಾನಿಯಾಗಿದೆ.