
ಬೆಂಗಳೂರು, ಅಕ್ಟೋಬರ್ 22: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 24ರವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಗಳು ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಈ ಪ್ರದೇಶಗಳ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯವಾಗಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಿದ್ದರೂ ಅಕ್ಟೋಬರ್ 25ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗುವ ಸಾಧ್ಯತೆ ಇದೆ ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ: ಹಿಂಗಾರು ಮಳೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ: ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದ ಸ್ವಾಮೀಜಿ ಹೇಳಿಕೆ
ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ . ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಬಹಳ ಕಡಿಮೆ ಇವೆ. ಈ ವರ್ಷ ವಾಡಿಕೆಯ ಮಳೆಯ ಪ್ರಮಾಣ ಬಹಳ ಕಡಿಮೆ ಇದ್ದು, ಶೇ.30-40ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆಯಾದರೂ, ಉತ್ತರ ಒಳನಾಡಿನ ಬಹುತೇಕ ಬಹಳ ಜಿಲ್ಲೆಗಳಿಂದ ವರುಣ ದೂರವೇ ಉಳಿದಿದ್ದಾನೆ ಎಂದು ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ಈ ಬಾರಿ ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಹೆಚ್ಚಿಗೆ ಚಳಿ ಇರಲಿದೆ. ಅದರಲ್ಲಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಒಳನಾಡಲ್ಲಿ ಚಳಿ ಜಾಸ್ತಿಯಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಷ್ಟೊಂದು ಚಳಿ ಇರೋದಿಲ್ಲ. ಎಲ್ನಿನೋ ಹಿನ್ನಲೆ ಚಳಿಗಾಲದ ತೀವ್ರತೆ ಕಡಿಮೆ ಇರಲಿದ್ದು, ಉಷ್ಣತೆ ವಾಡಿಕೆಗಿಂತ ಸ್ವಲ್ಪ ಹೆಚ್ಚೇ ಇರಲಿದೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:11 pm, Thu, 22 October 26