ಬೆಂಗಳೂರು: ಕಳೆದ ವರ್ಷ ಪರೀಕ್ಷೆಯ ಸಮಯದಲ್ಲಿ ರಾಜ್ಯ, ದೇಶ ಮತ್ತು ಅತಂರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆಯಾಗಿದ್ದ ಮತ್ತು ರಾಜ್ಯದಲ್ಲಿ ಕೋಲಾಹಲ ಮೂಡಿಸಿದ ಹಿಜಾಬ್ ವಿವಾದ (Hijab controversy) ಮತ್ತೆ ಮುನ್ನಲೆಗೆ ಬರುವ ಸಾಧ್ಯತೆ ಇದೆ. ಹೌದು ಮಾರ್ಚ್ 9ರಿಂದ ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಪ್ರಾರಂಭವಾಗಲಿದ್ದು, ಹಿಜಾಬ್ (Hijab) ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಮುಸ್ಲಿಂ ಸಂಘಟನೆಗಳು (Muslim Organizations) ರಾಜ್ಯ ಸರ್ಕಾರ (Karnataka Government) ಒತ್ತಾಯ ಮಾಡಿವೆ. ಹಿಜಾಬ್ ನಿಷೇಧದಿಂದ ಕಳೆದ ವರ್ಷ 5 ಸಾವಿರಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ. ಇದರಿಂದ ಶಿಕ್ಷಣವನ್ನು ಮೊಟಕುಗೊಳಿಸುವ ಸ್ಥಿತಿಗೆ ವಿದ್ಯಾರ್ಥಿನಿಯರು ಬಂದಿದ್ದಾರೆ. ಹೀಗಾಗಿ ಈ ಬಾರಿಯಾದರೂ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮುಸ್ಲಿಂ ಸಂಘಟನೆಗಳು ಮನವಿ ಮಾಡಿವೆ.
ಹಿಜಾಬ್ ವಿವಾದದ ಕುರಿತು ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ಸುಪ್ರೀಂಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯಲಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಗೆ ಪೀಠ ರಚನೆ ಮಾಡಲಾಗುವುದು ಎಂದು ಸಿಜೆಐ ಮಾಹಿತಿ ನೀಡಿದ್ದರು.
ಕಾಲೇಜು ಕ್ಯಾಂಪಸ್‌ಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಕರ್ನಾಟಕ ನಿಷೇಧಿಸಿರುವ ಕುರಿತು ವಿಚಾರಣೆ ಮಾಡಲು ಸಮಯ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಈ ಪ್ರಕರಣವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ವಕೀಲ ಶಾದನ್ ಫರಾಸತ್ ಪ್ರಸ್ತಾಪಿಸಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದಿಂದಾಗಿ ಹುಡುಗಿಯರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ವಿದ್ಯಾರ್ಥಿನಿಯರು ಈಗಾಗಲೇ ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ ಮತ್ತು ಮುಂಬರುವ ಪರೀಕ್ಷೆಗಳು ಮಾರ್ಚ್ 9 ರಂದು ಪ್ರಾರಂಭವಾಗಲಿವೆ ಫರಾಸತ್ ನ್ಯಾಯಾಲಯಕ್ಕೆ ತಿಳಿಸಿದರು. ತ್ರಿಸದಸ್ಯ ಪೀಠವು ಶೀಘ್ರದಲ್ಲೇ ವಿಚಾರಣೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ನ್ಯಾಯಾಲಯವು ಅರ್ಜಿದಾರರಿಗೆ ಭರವಸೆ ನೀಡಿದೆ.
ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಲಾಗಿತ್ತು, ಆದರೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವುಗಳನ್ನು ಅನುಮತಿಸಿದರು.
ಈ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾಯಮೂರ್ತಿ ಗುಪ್ತಾ ಹೇಳಿದ್ದರು, ಖಂಡಿತ ತೀರ್ಪಿನ ದೃಷ್ಟಿಯಿಂದ ಪೀಠವು, ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸುವ ಈ ಅರ್ಜಿಗಳನ್ನು ಸೂಕ್ತ ದೊಡ್ಡ ಪೀಠದ ರಚನೆಗಾಗಿ ಮುಖ್ಯ ನ್ಯಾಯಾಧೀಶರ ಮುಂದೆ ಇಡುವಂತೆ ಸೂಚಿಸಿತು.
ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ