ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆ ಕರೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ನಿಗದಿಯಾಗಿರುವ ಸಭೆಯಲ್ಲಿ ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಹ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆಗೆ (ಫೆ.9) ನಿಗದಿಯಾಗಿದೆ. ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ. ವಿವಿಧ ಜಿಲ್ಲೆಗಳ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳು ಸಚಿವರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದುಕೊಳ್ಳಲಿದ್ದಾರೆ. ಹಲವು ಜಿಲ್ಲೆಗಳ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಸಂಗ್ರಹಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ರಬಕವಿಯಲ್ಲಿ ಕಲ್ಲು ತೂರಾಟ: ಶಿಕ್ಷಕ, ವಿದ್ಯಾರ್ಥಿಗಳಿಗೆ ಗಾಯ
ಬಾಗಲಕೋಟೆ: ಹಿಜಾಬ್, ಕೇಸರಿ ಶಾಲು ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿದ್ದು ನಾಲ್ವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ. ಕಲ್ಲುತೂರಾಟದಲ್ಲಿ ರಸ್ತೆ ದಾಟುತ್ತಿದ್ದ ಶಿಕ್ಷಕ ಮಂಜುನಾಥ ನಾಯಕ್ ಅವರಿಗೆ ಗಾಯಗಳಾಗಿವೆ. ಮಂಜುನಾಥ ನಾಯಕ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಲಾಗಿದೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನವರು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಹಿಜಾಬ್ ವಿವಾದವನ್ನು ಸೃಷ್ಟಿಸಿ ಬಿಜೆಪಿ ತಲೆ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದೆ: ಕೆ ಎಸ್ ಈಶ್ವರಪ್ಪ
Published On - 6:06 pm, Tue, 8 February 22