ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಕುಟುಂಬದ ವಿರುದ್ಧದ ಕೇಸ್‌ಗೆ ಟ್ವಿಸ್ಟ್; ಚಾರ್ಜ್‌ಶೀಟ್‌ನಲ್ಲಿ 7 ಮಂದಿಗೆ ರಿಲೀಫ್!
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪ ನಡೆದ ಗಲಾಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಸೇರಿದಂತೆ ಏಳು ಮಂದಿಗೆ ಪ್ರಕರಣದಲ್ಲಿ ಯಾವುದೇ ಪಾತ್ರವಿಲ್ಲ ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮತ್ತೊಂದೆಡೆ, ದೂರುದಾರರೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಸಿಸಿಟಿವಿ ದೃಶ್ಯಗಳು ತನಿಖೆಯಲ್ಲಿ ಮಹತ್ವದ ಸಾಕ್ಷ್ಯಗಳಾಗಿವೆ. ಪ್ರಕರಣದಲ್ಲಿ ರಾಜಕೀಯ ಪಿತೂರಿಯ ಆರೋಪವೂ ಕೇಳಿಬಂದಿದೆ.

ಮುಖ್ಯಾಂಶಗಳು
- ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಕುಟುಂಬದ ವಿರುದ್ಧದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ
- ಚಾರ್ಜ್‌ಶೀಟ್‌ನಲ್ಲಿ ಕಿಶೋರ್ ಕುಮಾರ್ ಸೇರಿದಂತೆ ಏಳು ಮಂದಿಗೆ ರಿಲೀಫ್
- ದೂರುದಾರರೇ ದೊಣ್ಣೆ, ಕಲ್ಲು ಹಿಡಿದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ
ಬೆಂಗಳೂರು, ನವೆಂಬರ್ 20: ಪೊಲೀಸ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಹಾಗೂ ಅವರ ಕುಟುಂಬದ ವಿರುದ್ಧ ದಾಖಲಾಗಿದ್ದ ಹಲ್ಲೆ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕುಟುಂಬದ ವಿರುದ್ಧ ದೂರು ನೀಡಿದ್ದವರ ವಿರುದ್ಧವೇ ಈಗ ತನಿಖೆಯ ಬಿಸಿ ತಟ್ಟಿದೆ. ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರದ ಹೊಮ್ಮದೇವನಹಳ್ಳಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ಚಾರ್ಜ್‌ಶೀಟ್‌ನಲ್ಲಿ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಸೇರಿದಂತೆ ಏಳು ಮಂದಿಗೆ ಪ್ರಕರಣದಲ್ಲಿ ಯಾವುದೇ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ. ಸಿಸಿಟಿವಿ ದೃಶ್ಯಗಳು ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿವೆ.
ದೂರುದಾರರೇ ದೊಣ್ಣೆ, ಕಲ್ಲು ಹಿಡಿದು ಹಲ್ಲೆ ನಡೆಸಿದ ಆರೋಪ!
ಕಳೆದ ಅಕ್ಟೋಬರ್ 4ರಂದು ಬನ್ನೇರುಘಟ್ಟ ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಫಾತಿಮಾ ಮತ್ತು ಕಾಣಿಕ್ಯರಾಜ್ ಕುಟುಂಬದವರು ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್, ಅವರ ಸಹೋದರ ಅನಿಲ್ ಕುಮಾರ್ ಸೇರಿದಂತೆ ಏಳು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಆದರೆ, ತನಿಖೆ ಮುಂದುವರಿದಂತೆ ಪ್ರಕರಣದ ಚಿತ್ರಣ ಬದಲಾಗಿದೆ. ದೂರು ನೀಡಿದ್ದ ಕುಟುಂಬದ ಸದಸ್ಯರೇ ದೊಣ್ಣೆ ಮತ್ತು ಕಲ್ಲುಗಳನ್ನು ಹಿಡಿದು ಹಲವರ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ರಸ್ತೆಯಲ್ಲಿ ಯುವಕರ ಗುಂಪಿನ ಮೇಲೂ ಹಲ್ಲೆ ನಡೆಸಿರುವ ದೃಶ್ಯಗಳು ಪೊಲೀಸರ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳಾಗಿವೆ. ಈ ಹಿನ್ನೆಲೆಯಲ್ಲಿ ದೂರುದಾರರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಚಾರ್ಜ್‌ಶೀಟ್‌ನಲ್ಲಿ 7 ಮಂದಿಗೆ ರಿಲೀಫ್
ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್, ಅನಿಲ್ ಕುಮಾರ್, ಪ್ರವೀಣ್ ಕುಮಾರ್, ನಾಗವೇಣಿ, ಅಜಯ್, ನಾಗರಾಜ್ ರೆಡ್ಡಿ ಹಾಗೂ ನಂಜುಂಡರೆಡ್ಡಿ ಅವರಿಗೆ ಪ್ರಕರಣದಲ್ಲಿ ಯಾವುದೇ ಸಂಬಂಧವಿಲ್ಲ ಎಂದು ಉಲ್ಲೇಖಿಸಲಾಗಿದೆ. ಈ ನಡುವೆ ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ನಾಗವೇಣಿ ಆರೋಪಿಸಿದ್ದಾರೆ.
ಇದರಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡವಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಇನ್ಸ್‌ಪೆಕ್ಟರ್ ಕುಟುಂಬದ ಬೆಳವಣಿಗೆಯನ್ನು ಸಹಿಸದೆ ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ನಾಗವೇಣಿ ದೂರಿದ್ದಾರೆ.
ಇನ್ನು ಕಿಶೋರ್ ಕುಮಾರ್ ಅವರ ಸಹೋದರ ಅನಿಲ್ ಕುಮಾರ್ ಕೂಡ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದು, ಕುಟುಂಬದ ಗೌರವಕ್ಕೆ ಧಕ್ಕೆ ತಂದವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಾಗಿಯೂ ತಿಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




